371 (ಜೆ) ಆದೇಶಗಳ ಅನುಷ್ಠಾನ ಕುರಿತ ಸಂಪುಟ ಉಪ ಸಮಿತಿ ಸಭೆ | ಪ್ರಿನ್ಸಿಪಾಲ್‌ಗಳ 310 ಹುದ್ದೆ ಆಯ್ಕೆ ಪಟ್ಟಿ ಪುನರ್‌ ಪರಿಶೀಲನೆಗೆ ಸೂಚನೆ

ನಾಗಾವಿ ಎಕ್ಸಪ್ರೆಸ್ 

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಥಳೀಯ ವೃಂದ ಮತ್ತು ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂದರ್ಭದಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶೆ ಕುರಿತ ಸಂಪುಟ ಉಪ ಸಮಿತಿ ಅಧ್ಯಕ್ಷ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಲೋಪವಾಗಿದೆ ಎಂದು ಕೆಲವು ಅಭ್ಯರ್ಥಿಗಳು ಉಪಸಮಿತಿಯ ಅಧ್ಯಕ್ಷ ಪ್ರಿಯಾಂಕ್‌ ಖರ್ಗೆ ಅವರಿಗೆ ದೂರು ನೀಡಿದ್ದ ಪ್ರಯುಕ್ತ ಗುರುವಾರ ಸಚಿವ ಸಂಪುಟದ ಉಪ ಸಮಿತಿ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ಸದಸ್ಯರಾದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಉನ್ನತ ಶಿಕ್ಷಣ ಇಲಾಖೆ ಮೂಲಕ ಪ್ರಥಮ ದರ್ಜೆ ಕಾಲೇಜುಗಳ 310 ಹುದ್ದೆಗಳ ಆಯ್ಕೆ ಇತ್ತೀಚೆಗೆ ನಡೆದಿದ್ದು, ಆಯ್ಕೆ ಪ್ರಕ್ರಿಯೆಯಲ್ಲಿ ಡಿಪಿಎಆರ್‌ ನೀಡಿರುವ ಸ್ಪಷ್ಟ ನಿರ್ದೇಶನಗಳನ್ನು ಪಾಲಿಸುವಲ್ಲಿ ಲೋಪವಾಗಿದೆ ಎಂಬುದನ್ನು ಮನಗಂಡ ಆಯ್ಕೆ ಸಮಿತಿ ಆಯ್ಕೆ ಪಟ್ಟಿಯನ್ನು ಮರು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿತು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ನು ಕಡ್ಡಾಯವಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚಿಸಿದ ಸಮಿತಿಯು ತಪ್ಪಿದಲ್ಲಿ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿತು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಖುಷ್ಬು ಚೌಧರಿ, ಡಿಪಿಎಆರ್‌ ಪ್ರಧಾನ ಕಾರ್ಯದರ್ಶಿ ಕೆ.ಜಿ.ಜಗದೀಶ್‌, ಉನ್ನತ ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಭಾಗವಹಿಸಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!