Oplus_0

ನಾಲವಾರದಲ್ಲಿ ವಿಶ್ವ ಪರಿಸರ ದಿನಾಚರಣೆ | ಪ್ರತಿಯೊಬ್ಬರು ಸಸಿ ನೆಟ್ಟು ಬೆಳೆಸಿ ಪೋಷಿಸುವ ಕಾರ್ಯ ಮಾಡಿ: ಲಿಂಗಾರೆಡ್ಡಿ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ನಾಲವಾರ ವಲಯದ ಹಾಗೂ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಸ್ಥೆಯ ಸಹಭಾಗಿತ್ವದಲ್ಲಿ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ವತಿಯಿಂದ ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷಾರೋಪಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಮುಖಂಡ ಲಿಂಗಾರೆಡ್ಡಿ ಭಾಸರೆಡ್ಡಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪ್ರಕೃತಿಯನ್ನು ಉಳಿಸುವ ಮೂಲಕವೇ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ನಿರ್ಮಿಸಬಹುದು ಎಂದು ಹೇಳಿದರು. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಸ್ಥೆಯ ಪ್ರಾಚಾರ್ಯ ಹನಮಂತ ದಿಗಸಂಗಿ ಅವರು ಪರಿಸರ ಮತ್ತು ಮಾನವ ಜೀವನದ ಅವಿನಾಭಾವ ಸಂಬಂಧವನ್ನು ವಿವರಿಸಿದರು. ವಿದ್ಯಾರ್ಥಿಗಳು ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಂಡು ಪ್ರಕೃತಿ ಸಂಪತ್ತಿನ ರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯ ಶಿಕ್ಷಕಿ ಶಿಲ್ಪಾ ಮಾತನಾಡಿ, ಪರಿಸರ ಮಾಲಿನ್ಯದಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಅರಿವು ಮೂಡಿಸಿ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರ ವೃಂದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಸೇವಾ ಪ್ರತಿನಿಧಿಗಳು , ವಿ ಎಲ್ ಈ , ಹಾಗೂ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಲಾಯಿತು.

ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಪ್ರತಿಜ್ಞೆಯನ್ನು ಸ್ವೀಕರಿಸಿ, ಪ್ರಕೃತಿ ಸಂಪತ್ತಿನ ಉಳಿವಿಗೆ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪ ಮಾಡಿದರು. “ಪರಿಸರ ಉಳಿದರೆ ಜೀವನ ಉಳಿಯುತ್ತದೆ” ಎಂಬ ಸಂದೇಶದೊಂದಿಗೆ ನಡೆದ ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಪರಿಸರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮವು ಶೌರ್ಯ ವಿಪತ್ತು ನಿರ್ವಹಣಾ ಘಟಕ, ಸೇವಾ ಪ್ರತಿನಿಧಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಕ್ರಿಯ ಸಹಭಾಗಿತ್ವದೊಂದಿಗೆ ಯಶಸ್ವಿಯಾಗಿ ನೆರವೇರಿತು.

Spread the love

Leave a Reply

Your email address will not be published. Required fields are marked *

You missed

error: Content is protected !!