ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ರಾಜ್ಯಾದ್ಯಂತ ಸ್ಪಂದನೆ | ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರದ ಬದ್ಧತೆ ಮತ್ತೊಮ್ಮೆ ಸಾಬೀತು: ಸಚಿವ ಪ್ರಿಯಾಂಕ್ ಖರ್ಗೆ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (CPC) ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯಾದ್ಯಂತ ಅಭ್ಯರ್ಥಿಗಳಿಂದ ಅತ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಇದು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಅಭ್ಯರ್ಥಿಗಳ ಮನವಿಯನ್ನು ಪರಿಗಣಿಸಿ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಸರ್ಕಾರ ವಿಸ್ತರಿಸಿದ್ದು, ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಜುಲೈ 8, 2026 ಸಂಜೆ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಅರ್ಜಿ ತಿದ್ದುಪಡಿ ಮಾಡಲು 2026ರ ಜುಲೈ 9 ರಿಂದ ಜುಲೈ 12, 2026ರವರೆಗೆ ಅವಕಾಶ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಯೋಗದಲ್ಲಿ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲು ಪೊಲೀಸ್‌ ಕಾನ್ಸಟೇಬಲ್ ವಿಭಾಗದ ಹುದ್ದೆಗಳಿಗೆ 2,80,216 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಹುದ್ದೆಗಳಿಗೆ 59,309 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವುದು ರಾಜ್ಯದ ಯುವಜನರಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಉತ್ಸಾಹ ಹೆಚ್ಚಿರುವುದನ್ನು ತೋರಿಸುತ್ತದೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದ್ದು, ಅರ್ಹ ಅಭ್ಯರ್ಥಿಗಳಿಗೆ ನ್ಯಾಯಸಮ್ಮತ ಅವಕಾಶ ದೊರಕುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಯುವಜನರು ಯಾವುದೇ ಆತಂಕವಿಲ್ಲದೆ ನಿಗದಿತ ಅವಧಿಯೊಳಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ನೀಡಲಾಗಿರುವ ತಿದ್ದುಪಡಿ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಪಡೆ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸಾಮರ್ಥ್ಯಯುತ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!