ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ | ಹೈಕಮಾಂಡ್‌ ಮೇಲೆ ಆಕಾಂಕ್ಷಿಗಳ ಒತ್ತಡ ತಂತ್ರ, ಗುಟ್ಟು ಬಿಟ್ಟುಕೊಡದ ಹೈಕಮಾಂಡ್

-ಕಾಶಿನಾಥ ಗುತ್ತೇದಾರ

ನಾಗಾವಿ ಎಕ್ಸಪ್ರೆಸ್ ಚಿತ್ತಾಪುರ 

ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ರೂಪಿಸಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ವೀಕ್ಷಕರು ಚಿತ್ತಾಪುರ ಕ್ಷೇತ್ರಕ್ಕೆ ಭೇಟಿ ನೀಡಿ ಸಭೆ ನಡೆಸಿ, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅಭಿಪ್ರಾಯ ಸಂಗ್ರಹಿಸಿಕೊಂಡು ಹೋಗಿದ್ದಾರೆ. ಇದರ ಬೆನ್ನಲ್ಲೇ, ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಆಕಾಂಕ್ಷಿಗಳ ಕಣ್ಣು ನೆಟ್ಟಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್‌ ಮೇಲೆ ತೀವ್ರ ಒತ್ತಡ ತರುವ ನಿಟ್ಟಿನಲ್ಲಿ ಆಕಾಂಕ್ಷಿಗಳು ಲಾಬಿ ಆರಂಭಿಸಿದ್ದಾರೆ. ಆದರೆ ಹೈಕಮಾಂಡ್ ಮಾತ್ರ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಹಾಲಿ ಅಧ್ಯಕ್ಷ ಭೀಮಣ್ಣ ಸಾಲಿ ಅವರನ್ನೇ ಮುಂದುವರಿಸಲಾಗುತ್ತದೆಯೇ? ಅಥವಾ ಹೊಸ ಮುಖಕ್ಕೆ ಅವಕಾಶ ಕಲ್ಪಿಸಲಾಗುತ್ತದೆಯೇ? ಎಂಬ ಚರ್ಚೆ ಪಕ್ಷದ ವಲಯದಲ್ಲಿ ತೀವ್ರಗೊಂಡಿದೆ. ಮತ್ತೊಂದೆಡೆ, ಪಕ್ಷದ ಸಂಘಟನೆಯನ್ನು ಹೊಸ ಉತ್ಸಾಹದೊಂದಿಗೆ ಮುನ್ನಡೆಸಲು ಹೊಸ ಮುಖಕ್ಕೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯವೂ ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.

ಮುಂಬರುವ ಸ್ಥಳೀಯ ಸಂಸ್ಥೆಗಳ, ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ತಾಲೂಕಿನ ಎಲ್ಲ ಬಣಗಳು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವ ಸಾಮರ್ಥ್ಯ ಹೊಂದಿರುವ ನಾಯಕನಿಗೆ ಬ್ಲಾಕ್ ಅಧ್ಯಕ್ಷ ಪಟ್ಟ ನೀಡಬೇಕು ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿದೆ.

ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಮ್ಮ ರಾಜಕೀಯ ಸಂಪರ್ಕ, ಪಕ್ಷದೊಳಗಿನ ಬೆಂಬಲ ಹಾಗೂ ವೈಯಕ್ತಿಕ ಪ್ರಭಾವದ ಮೂಲಕ ವರಿಷ್ಠರ ಗಮನ ಸೆಳೆಯಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವುದು ಕಂಡುಬಂದಿದೆ.

ಬ್ಲಾಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪೈಕಿ ಮುಕ್ತಾರ್ ಪಟೇಲ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಈ ಬಾರಿ ಮುಸ್ಲಿಂ ಸಮಾಜಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಮುಸ್ಲಿಂ ಮುಖಂಡರು ಸಚಿವ ಪ್ರಿಯಾಂಕ್ ಖರ್ಗೆ ಅವರ ಮುಂದಿಟ್ಟಿದ್ದಾರೆ.

ಅಧ್ಯಕ್ಷ ಸ್ಥಾನವನ್ನು ಹಲವು ಆಕಾಂಕ್ಷಿಗಳು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅಧಿಕಾರ ಗಿಟ್ಟಿಸಿಕೊಳ್ಳಲು ಜಾತಿ, ವೈಯಕ್ತಿಕ ಪ್ರಭಾವ ಮತ್ತಿತರ ಪ್ರಯತ್ನಗಳನ್ನು ಮಾಡುತ್ತಿರುವುದು ಗುಟ್ಟಾಗೇನು ಉಳಿದಿಲ್ಲ. ಹೀಗಾಗಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಮುಂದುವರೆದಿದೆ. ಈ ನಿಟ್ಟಿನಲ್ಲಿ ಆಕಾಂಕ್ಷಿಗಳು ತಮ್ಮ ಬಂಬಲಿಗರ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.

ತಾಲೂಕಿನಲ್ಲಿ ಕಾಂಗ್ರೆಸ್ ನ ಕೆಲ ನಾಯಕರು ತಮ್ಮ ಬೆಂಬಲಿಗರಿಗೆ ಅಧ್ಯಕ್ಷ ಸ್ಥಾನ ಕೊಡಿಸಲು ಲಾಬಿ ನಡೆಸುತ್ತಿದ್ದಾರೆ. ಇನ್ನೂ ಆಕಾಂಕ್ಷಿಗಳು ಹಿರಿಯ ಮುಖಂಡರ ಬೇಟಿ ಮಾಡಿ ತಮ್ಮ ಸೇವೆ ಹಾಗೂ ರಾಜಕೀಯ ಹಿನ್ನೆಲೆಯನ್ನು ಮುಂದಿಟ್ಟುಕೊಂಡು ಹುದ್ದೆ ಗಿಟ್ಟಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು:

ಭೀಮಣ್ಣ ಸಾಲಿ ಕಳೆದ 17 ವರ್ಷಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪ್ರಸ್ತುತ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆಯಲ್ಲಿದ್ದಾರೆ ಹಾಗೂ ಎನ್ಈಕೆಆರ್’ಟಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗೆ ಎಂಎಲ್ಸಿ ಸ್ಥಾನಕ್ಕೆ ತೀವ್ರ ಕಸರತ್ತು ನಡೆಸಿದ್ದರು ಆದರೆ ಅದು ಸಿಗದೇ ಇರುವುದಕ್ಕೆ ಹೈಕಮಾಂಡ್ ವಿರುದ್ಧ ಮುನಿಸಿಕೊಂಡು ಅಸಮಾಧಾನ ವ್ಯಕ್ತಪಡಿಸಿದರು. ಈಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಹೈಕಮಾಂಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿಯೇ ಮುಂದುವರಿಸಿದರೆ ಅದಕ್ಕೆ ಸಿದ್ದ ಎಂದು ಭೀಮಣ್ಣ ಸಾಲಿ ತಿಳಿಸಿದ್ದಾರೆ.

ಉಳಿದಂತೆ ಮುಕ್ತಾರ್ ಪಟೇಲ್, ಜಗಣ್ಣಗೌಡ ರಾಮತೀರ್ಥ, ಡಾ.ಪ್ರಭುರಾಜ ಕಾಂತಾ, ಮಲ್ಲಿಕಾರ್ಜುನ ಕಾಳಗಿ, ಬಸವರಾಜ ಚಿನ್ನಮಳ್ಳಿ, ಶಾಂತಣ್ಣ ಚಾಳೀಕಾರ್, ವೀರುಪಾಕ್ಷಪ್ಪ ಗಡ್ಡದ್ ವಿನೋದ ಗುತ್ತೇದಾರ ಅವರು ಆಕಾಂಕ್ಷಿಗಳಾಗಿದ್ದಾರೆ.

ಮುಕ್ತಾರ್ ಪಟೇಲ್: ಕಾಂಗ್ರೆಸ್ ಅಲ್ಪಸಂಖ್ಯಾತರ ಅಧ್ಯಕ್ಷರಾಗಿ ಕಳೆದ 15 ವರ್ಷಗಳಿಂದ ಸೇವೆಯಲ್ಲಿದ್ದಾರೆ ಹಾಗೂ ಜೆಸ್ಕಾಂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ಮುಸ್ಲಿಂ ಸಮಾಜಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಈಗಾಗಲೇ ಮುಸ್ಲಿಂ ಮುಖಂಡರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭೇಟಿ ಮಾಡಿ ಒತ್ತಡ ಹೇರಿದ್ದಾರೆ.

ಜಗಣ್ಣಗೌಡ ರಾಮತೀರ್ಥ: ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸಿದ್ದಾರೆ. ಇವರ ಪರವಾಗಿ ಕಾಂಗ್ರೆಸ್ ಪಕ್ಷದ ಒಂದು ತಂಡವೇ ಕೆಲಸ ಮಾಡುತ್ತಿದೆ. ಹೇಗಾದರೂ ಮಾಡಿ ಇವರನ್ನೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಡಾ.ಪ್ರಭುರಾಜ ಕಾಂತಾ: ಹೈಕಮಾಂಡ್ ಸೂಚಿಸಿದರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಸಿದ್ದನಿದ್ದೇನೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಡಾ.ಪ್ರಭುರಾಜ ಕಾಂತಾ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಕಾಳಗಿ: ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದು, ಇಲ್ಲಿವರೆಗೆ ಎಲ್ಲರಿಗೂ ಅವಕಾಶ ಸಿಕ್ಕಿದೆ ಆದರೆ ಪರಿಶಿಷ್ಟ ಜಾತಿಗೆ ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಹೀಗಾಗಿ ಈ ಬಾರಿ ಪರಿಶಿಷ್ಟ ಜಾತಿಗೆ ಅವಕಾಶ ಮಾಡಿಕೊಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನಿಯೋಗದೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಸವರಾಜ ಚಿನ್ನಮಳ್ಳಿ: ಕೋಲಿ ಸಮಾಜದ ಹಿರಿಯ ಮುಖಂಡ ಹಾಗೂ ಕಾಂಗ್ರೆಸ್ ಪಕ್ಷದ ವಕ್ತಾರ ಬಸವರಾಜ ಚಿನ್ನಮಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಪ್ರಭಲ ಆಕಾಂಕ್ಷಿಯಾಗಿದ್ದು ಈಗಾಗಲೇ ತಮ್ಮ ಬೆಂಬಲಿಗರೊಂದಿಗೆ ಕೋಲಿ ಸಮಾಜದ ಮುಖಂಡರೊಂದಿಗೆ ಬೆಂಗಳೂರಿಗೆ ತೆರಳಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಭೇಟಿ ಮಾಡಿ ಒತ್ತಡ ಹೇರಿದ್ದಾರೆ.

ಶಾಂತಣ್ಣ ಚಾಳೀಕಾರ್: ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಾಂತಣ್ಣ ಚಾಳೀಕಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಪಕ್ಷದ ಹೈಕಮಾಂಡ್ ಆಶೀರ್ವದಿಸಿದರೆ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ವೀರುಪಾಕ್ಷಪ್ಪ ಗಡ್ಡದ್: ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ವೀರುಪಾಕ್ಷಪ್ಪ ಗಡ್ಡದ್, ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ನಿರ್ದೇಶಕರಾಗಿ, ಕಾರ್ಮಿಕ ವೇತನ ಮಂಡಳಿ ಸದಸ್ಯರಾಗಿ, ಕಾಳಗಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು ಪಕ್ಷದ ಮುಖಂಡರು ಹಾಗೂ ಹೈಕಮಾಂಡ್ ಆಶೀರ್ವಾದ ಮಾಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ವಿನೋದ ಗುತ್ತೇದಾರ: ಪುರಸಭೆ ಮಾಜಿ ಸದಸ್ಯ ವಿನೋದ ಗುತ್ತೇದಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಈಡಿಗ ಸಮಾಜದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಲ್ಲಿವರೆಗೆ ಹಿಂದುಳಿದ ಈಡಿಗ ಸಮಾಜಕ್ಕೆ ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಹೀಗಾಗಿ ಈ ಬಾರಿ ಈಡಿಗ ಸಮಾಜಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಮಧ್ಯೆ ಎಷ್ಟೇ ಪೈಪೋಟಿ, ಜಿದ್ದಾಜಿದ್ದಿ ಇದ್ದರೂ ಕೊನೆಗೆ ಈ ಭಾಗದ ಹೈಕಮಾಂಡ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೃಪಾಕಟಾಕ್ಷ ಯಾರ ಮೇಲೆ ಆಗಲಿದೆ ಅವರೇ ಬ್ಲಾಕ್ ಕಾಂಗ್ರೆಸ್ ಸಾರಥಿ ಆಗಲಿದ್ದಾರೆ. ಅಲ್ಲಿವರೆಗೆ ಕಾದು ನೋಡಬೇಕಷ್ಟೇ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿವರ: ಚಿತ್ತಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ.ಆರ್.ಕಾಂತಾ, ಅಬ್ದುಲ್ ರಹೇಮಾನ್, ಯಾಸೀನ್ ಅಲಿ ವಕೀಲ್, ಹಣಮಂತರಾಯ ಅಲ್ಲೂರ, ಅಜೀಜ್ ಸೇಠ್, ಶ್ರೀನಿವಾಸ ಸಗರ, ಹಣಮಂತರಾಯ ಅಲ್ಲೂರ, ಡಾ.ಅಬ್ದುಲ್ ಕರೀಂ ಅವರು ಸೇವೆ ಸಲ್ಲಿಸಿದ್ದು, ಪ್ರಸ್ತುತ ಭೀಮಣ್ಣ ಸಾಲಿ ಅವರೇ  ಸುಧೀರ್ಘವಾಗಿ 17 ವರ್ಷಗಳಿಂದ ಸೇವೆಯಲ್ಲಿದ್ದಾರೆ. ಇದು ರಾಜ್ಯದಲ್ಲಿಯೇ ಇತಿಹಾಸ ದಾಖಲಾಗಿದೆ ಎಂದು ಹೇಳಲಾಗಿದೆ.

“ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಡ್ತಿ ನೀಡಿದರೆ ಪಕ್ಷದ ತತ್ವ ಸಿದ್ಧಾಂತಗಳಡಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಇಲ್ಲದಿದ್ದರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿಯೇ ಮುಂದುವರಿಸಿದರೆ ಅದಕ್ಕೂ ಬದ್ದ ಅಥವಾ ಹೊಸಬರಿಗೆ ಅವಕಾಶ ಮಾಡಿಕೊಟ್ಟರೆ ಅವರಿಗೆ ಸಹಕಾರ ನೀಡುತ್ತೇನೆ ಒಟ್ಟಾರೆ ಹೈಕಮಾಂಡ್ ನಿರ್ಧಾರಕ್ಕೆ ಬದ್ದ”.-ಭೀಮಣ್ಣ ಸಾಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು.

Spread the love

Leave a Reply

Your email address will not be published. Required fields are marked *

You missed

error: Content is protected !!