Oplus_0

ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಿ | ಬರಪೀಡಿತ ಪಟ್ಟಿಯಿಂದ ಕಲಬುರಗಿ ಜಿಲ್ಲೆ ಕೈಬಿಟ್ಟಿರುವುದಕ್ಕೆ ಗುತ್ತೇದಾರ ಆಕ್ರೋಶ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಮಳೆ ಕೊರತೆಯಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ರೈತರ ಬೆಳೆಗಳು ಒಣಗಿ ಹೋಗಿದ್ದರೂ, ರಾಜ್ಯ ಸರ್ಕಾರ ಘೋಷಿಸಿರುವ ಬರಗಾಲ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆಯ ಯಾವುದೇ ತಾಲೂಕನ್ನು ಸೇರಿಸದಿರುವುದು ಖಂಡನೀಯ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಜನರು ನಿರೀಕ್ಷೆಗೂ ಮೀರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಬರಗಾಲ ಘೋಷಣೆ ವಿಚಾರದಲ್ಲಿ ಸರ್ಕಾರ ಜಿಲ್ಲೆಗೆ ಅನ್ಯಾಯ ಮಾಡಿರುವುದು ವಿಷಾದನೀಯ ಎಂದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ತೊಗರಿ, ಹತ್ತಿ ಸೇರಿದಂತೆ ಪ್ರಮುಖ ಬೆಳೆಗಳು ಹಾನಿಯಾಗಿವೆ ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದು, ಬೆಳೆ ಹಾನಿಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಜಿಲ್ಲೆಯ ಮಳೆ ಕೊರತೆ ಇರುವ ಎಲ್ಲ ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ, ರೈತರಿಗೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಆಡಳಿತ ಪಕ್ಷದ ಶಾಸಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಕಲಬುರಗಿ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರು ಆಡಳಿತ ಪಕ್ಷದ ಶಾಸಕರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು.

ಕಲಬುರಗಿ ಜಿಲ್ಲೆಯ ಆರ್ಥಿಕತೆ ಪ್ರಮುಖವಾಗಿ ಕೃಷಿಯನ್ನೇ ಅವಲಂಬಿಸಿದೆ. ತೊಗರಿ ಬೆಳೆ ಹಾನಿಯಾದರೆ ರೈತರ ಬದುಕಿನ ಜೊತೆಗೆ ತೊಗರಿ ಬೇಳೆ ಮಿಲ್‌ಗಳು, ಕೃಷಿ ಉತ್ಪನ್ನಗಳ ವ್ಯಾಪಾರ, ಗೋದಾಮುಗಳು, ಸಾರಿಗೆ, ಬೀಜ ಸಂಸ್ಕರಣಾ ಘಟಕಗಳು ಸೇರಿದಂತೆ ವಿವಿಧ ಕೃಷಿ ಆಧಾರಿತ ಉದ್ಯಮಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವ್ಯಾಪಾರ, ಉದ್ಯೋಗ ಹಾಗೂ ಜಿಲ್ಲೆಯ ಒಟ್ಟಾರೆ ಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರ ವಿಳಂಬ ಮಾಡದೆ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!