ವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಬಿಜೆಪಿ ಆಗ್ರಹ
ನಾಗಾವಿ ಎಕ್ಸಪ್ರೆಸ್
ವಾಡಿ: ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ಸಿಗದೆ, ಮೂಲಭೂತ ಸೌಕರ್ಯಗಳ ಕೊರತೆಯಿಂದ ರೋಗಿಗಳು ಪರದಾಟ, ಸಿಬ್ಬಂದಿಯ ಜವಾಬ್ದಾರಿರಹಿತ ವರ್ತನೆ ಖಂಡಿಸಿ ಬಿಜೆಪಿ ಸ್ಥಳೀಯ ಅಧ್ಯಕ್ಷ ವೀರಣ್ಣ ಯಾರಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಸಮುದಾಯ ಕೇಂದ್ರದ ದ್ವತೀಯ ದರ್ಜೆ ಸಹಾಯಕ ಸೂರ್ಯಕಾಂತ ಹೇರೂರ ಅವರಿಗೆ ಸಲ್ಲಿಸಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ಚಿಕಿತ್ಸೆಗೆ ಆಗಮಿಸುವ ಬಡ ಹಾಗೂ ಗ್ರಾಮೀಣ ಭಾಗದ ರೋಗಿಗಳೊಂದಿಗೆ ವೈದ್ಯಕೀಯ ಮತ್ತು ಆಡಳಿತ ಮಂಡಳಿಯ ಸಿಬ್ಬಂದಿ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.
ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದೆ ರೋಗಿಗಳನ್ನು ನಿರ್ಲಕ್ಷಿಸುವುದು ಮತ್ತು ತುರ್ತು ಸಂದರ್ಭಗಳಲ್ಲಿ ಕಾಲಹರಣ ಮಾಡುವುದು ಇಲ್ಲಿ ಸರ್ವೇ ಸಾಮಾನ್ಯವಾಗಿದೆ ಎಂದು ಆರೋಪಿಸಿದರು.
ಆಸ್ಪತ್ರೆಯಲ್ಲಿರುವ ಅನೇಕ ಲಕ್ಷಾಂತರ ರೂಪಾಯಿ ಮೌಲ್ಯದ ವೈದ್ಯಕೀಯ ಉಪಕರಣಗಳು ಸೂಕ್ತ ನಿರ್ವಹಣೆ ಇಲ್ಲದೆ ಹಾಗೂ ಸಣ್ಣಪುಟ್ಟ ತಾಂತ್ರಿಕ ದೋಷಗಳಿಂದಾಗಿ ಮೂಲೆಗುಂಪಾಗಿವೆ. ಇದರಿಂದಾಗಿ ಅಪಘಾತ ಹಾಗೂ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ತುರ್ತು ಚಿಕಿತ್ಸೆ ಸಿಗದೆ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗುವಂತಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿಗಳು ತಕ್ಷಣವೇ ವಾಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತನಿಖೆ ನಡೆಸಬೇಕು. ಆಸ್ಪತ್ರೆಯಲ್ಲಿನ ಕರ್ತವ್ಯಲೋಪ ಮತ್ತು ಮೂಲಭೂತ ಸೌಕರ್ಯಗಳನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ರೋಗಿಗಳ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ಒಂದು ವಾರದೊಳಗೆ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರು ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಯುವ ಮೋರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಸ್ಥಳೀಯ ಮುಖಂಡರಾದ ಪ್ರಕಾಶ ಪೂಜಾರಿ, ರಾಜು ಶಾಲಿ, ಮಲ್ಲಿಕಾರ್ಜುನ ಸಾತಖೇಡ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
