Oplus_0

ಚಿತ್ತಾಪುರ ಪಿಎಸ್ಐ ಗೆ ಮನವಿ | ಬಸವಣ್ಣನವರಿಗೆ ಅವಹೇಳನ, ಲೇಖಕ ರವಿ ಹಂಜ್ ವಿರುದ್ಧ ಕ್ರಮಕ್ಕೆ ಲಿಂಗಾಯತ ಮಹಾಸಭಾ ಆಗ್ರಹ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ವಿಶ್ವಗುರು ಬಸವಣ್ಣನವರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವ ಲೇಖಕ ರವಿ ಹಂಜ್ ಅವರನ್ನು ತಕ್ಷಣವೇ ಬಂಧಿಸಬೇಕು ಮತ್ತು ಅವರ ವಿವಾದಿತ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ವತಿಯಿಂದ ಶುಕ್ರವಾರ ಪಟ್ಟಣದ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಾಸಭಾದ ತಾಲೂಕು ಅಧ್ಯಕ್ಷ ನಾಗರಾಜ ಸಾಹು ಭಂಕಲಗಿ ಮಾತನಾಡಿ, ಕರ್ನಾಟಕ ಸರ್ಕಾರವು ವಿಶ್ವಗುರು ಬಸವಣ್ಣನವರ ಸಾಮಾಜಿಕ ಹಾಗೂ ಸಂವಿಧಾನಾತ್ಮಕ ತತ್ವಗಳನ್ನು ಮನಗಂಡು ಅವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ. ಅಲ್ಲದೆ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸುವಂತೆ ಆದೇಶಿಸಿದೆ. ಇಂತಹ ಮಹಾನ್ ಮಾನವತಾವಾದಿಯ ಬಗ್ಗೆ ಸ್ವಯಂಘೋಷಿತ ಸಂಶೋಧಕ ರವಿ ಹಂಜ್ ಅವರು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಸಮಸ್ತ ಬಸವ ಭಕ್ತರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನದತ್ತವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಮಹಾಸಭೆ ಸದಾ ಗೌರವ ನೀಡುತ್ತದೆ. ಆದರೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವಂತಹ ಪ್ರಚೋದನಕಾರಿ ಬರಹ ಮತ್ತು ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ರವಿ ಹಂಜ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕೂಡಲೇ ಬಂಧಿಸಬೇಕು ಮತ್ತು ವಿವಾದಿತ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಭಂಕಲಗಿ, ಕಾರ್ಯದರ್ಶಿ ಆನಂದ ಪಾಟೀಲ ನರಿಬೋಳಿ, ಪ್ರಸಾದ ಅವಂಟಿ, ಪ್ರಮುಖರಾದ ಮಲ್ಲರೆಡ್ಡಿ ಗೋಪಸೇನ, ಬಸವರಾಜ ಹೂಗಾರ, ಅನಿಲ್ ವಡ್ಡಡಗಿ, ಚಂದ್ರಶೇಖರ ಉಟಗೂರ, ಕೋಟೇಶ್ವರ ರೇಶ್ಮಿ ಸೇರಿದಂತೆ ತಾಲೂಕು, ನಗರ ಹಾಗೂ ಯುವ ಘಟಕದ ಪದಾಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!