Oplus_0

ಶಹಾಬಾದ: ಕೆಟ್ಟು ನಿಂತ 108 ತುರ್ತು ಆಂಬುಲೆನ್ಸ್, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಸ್ತಾನ ಆಕ್ರೋಶ

ನಾಗಾವಿ ಎಕ್ಸಪ್ರೆಸ್ 

ಶಹಾಬಾದ: ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿರುವ 108 ತುರ್ತು ಆಂಬುಲೆನ್ಸ್ ಕಳೆದ ಎರಡು ವರ್ಷಗಳಿಂದ ಕೆಟ್ಟು ನಿಂತಿದ್ದು, ಸಾರ್ವಜನಿಕರು ತುರ್ತು ಆರೋಗ್ಯ ಸೇವೆ ಪಡೆಯಲು ಪರದಾಡುವಂತಾಗಿದೆ ಎಂದು ಮಹ್ಮದ ಮಸ್ತಾನ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎಂಒ ಡಾ. ಸಂತೋಷ ಪಾಟೀಲ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಶಹಾಬಾದ ತಾಲೂಕಿನಲ್ಲಿ ಸುಮಾರು ಒಂದು ಲಕ್ಷ ಜನಸಂಖ್ಯೆ ಇದ್ದು, ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು 108 ಆಂಬುಲೆನ್ಸ್ ಸೇವೆ ಅತ್ಯಂತ ಅವಶ್ಯಕವಾಗಿದೆ. ಆದರೆ, ಎರಡು ವರ್ಷಗಳಿಂದ ಆಂಬುಲೆನ್ಸ್ ದುರಸ್ತಿಯಾಗದೆ ನಿಂತಿರುವುದು ಆರೋಗ್ಯ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಈ ಕುರಿತು ಸಾರ್ವಜನಿಕರು ಅಧಿಕಾರಿಗಳನ್ನು ಪ್ರಶ್ನಿಸಿದಾಗಲೆಲ್ಲ ಇಂಜಿನ್ ಕೆಟ್ಟಿದೆ ಎಂಬ ಉತ್ತರ ನೀಡಲಾಗುತ್ತಿದೆ ಎಂದು ದೂರಿದರು.

ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ತುರ್ತು ಸೇವೆಗೆ ಬಳಸುವ ನಗು-ಮಗು ಆಂಬುಲೆನ್ಸ್‌ಗೆ ಕೂಡ ರೂ.600 ಶುಲ್ಕ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಅಪಘಾತಗಳು ಸಂಭವಿಸಿದಾಗ ಗಾಯಾಳುಗಳನ್ನು ತಕ್ಷಣ ಕಲಬುರಗಿಗೆ ಕರೆದೊಯ್ಯಲು ಆಟೋ, ಟಂಟಂ ವಾಹನಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ರೈತರು, ಕಾರ್ಮಿಕರು ಸೇರಿದಂತೆ ಬಡ ಮತ್ತು ಮಧ್ಯಮ ವರ್ಗದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಈ ಸಮಸ್ಯೆಯನ್ನು ರಾಜ್ಯ ಸರ್ಕಾರದ ಸಂಬಂಧಪಟ್ಟ ಸಚಿವರು, ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ಸಂಬಂಧಪಟ್ಟ ಸಚಿವರು ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಶಹಾಬಾದ ಸಮುದಾಯ ಆರೋಗ್ಯ ಕೇಂದ್ರದ 108 ಆಂಬುಲೆನ್ಸ್‌ನ್ನು ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಮಸ್ಯೆಯನ್ನು ಇನ್ನೂ ವಿಳಂಬ ಮಾಡದೆ ಪರಿಹರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮಹ್ಮದ ಮಸ್ತಾನ ಮನವಿಯಲ್ಲಿ ಎಚ್ಚರಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!