ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಯವರಿಗಿಲ್ಲ: ಕಲ್ಯಾಣರಾವ ತೊನಸನಳ್ಳಿ
ನಾಗಾವಿ ಎಕ್ಸಪ್ರೆಸ್
ಕಲಬುರ್ಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸತತ 3 ಬಾರಿ ಶಾಸಕರಾಗಿ ವಿವಿಧ ಇಲಾಖೆಯ ಸಚಿವರಾಗಿ ಜನಪರವಾದ ಕೆಲಸ ಮಾಡುತ್ತಿರುವುದು ಬಿಜೆಪಿ ಮುಖಂಡರಿಗೆ ಅರಗಿಸಿಕೊಳ್ಳಲಾಗದೆ ಪ್ರತಿಯೊಂದು ವಿಷಯಕ್ಕೂ ಸಚಿವರ ಹೆಸರು ತಳಕು ಹಾಕಿ ರಾಜೀನಾಮೆ ಕೇಳುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ಸಂಚಾಲಕ ಕಲ್ಯಾಣರಾವ ತೊನಸನಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತಿಚೆಗೆ ಬೀದರ್ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಪ್ರಿಯಾಂಕ್ ಖರ್ಗೆ ಆಪ್ತರ ಹೆಸರು ಡೆತ್ ನೋಟಲ್ಲಿ ಉಲ್ಲೇಖಿಸಲಾಗಿದೆ. ಆಪ್ತರು ಎನ್ನುವ ಒಂದೇ ಕಾರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮೇಲೆ ಇಲ್ಲ ಸಲ್ಲದ ಆರೋಪ ಮಾಡಿ ಬಿಜೆಪಿ ಮುಖಂಡರು ಸಚಿವರ ರಾಜೀನಾಮೆ ಕೇಳುವ ಮೂಲಕ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ? ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರೇ ಖುದ್ದಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಇಲಾಖೆಗೆ ವಹಿಸಿ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣಿಕರ್ತರು ಯಾರೇ ಆಗಲಿ ಅವರಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ಆಗಲೆಂದು ಸಚಿವರು ಮೊದಲ ದಿನದಿಂದಲೂ ಹೇಳಿದಾರೆ.
ಸಂಪೂರ್ಣ ತನಿಖೆ ಮುಗಿಯುವವರೆಗೂ ಸಹನೆ ತೋರದೆ, ಬಿಜೆಪಿಯವರು ಸಚಿವರ ರಾಜೀನಾಮೆ ಕೇಳುವ ಮುಖಾಂತರ ಸಚಿನ್ ಪಾಂಚಾಳ ಸಾವಿನಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ. ಯಾವುದೇ ಕಾರಣಕ್ಕೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.