ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು  ನಿಯಮಾವಳಿಗಳು ಜುಲೈ ಎರಡನೆಯ ವಾರದಲ್ಲಿ ಅಂತಿಮ: ಸಚಿವ ಪ್ರಿಯಾಂಕ್ ಖರ್ಗೆ 

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಆಸ್ತಿಗಳಿಗೆ ಇ-ಸ್ವತ್ತು ವಿತರಿಸುವಲ್ಲಿ ರೂಪಿಸಲಾಗುತ್ತಿರುವ ಕರಡು ನಿಯಮಾವಳಿಗಳು ಈ ಮಾಸಾಂತ್ಯಕ್ಕೆ ಸಿದ್ಧಗೊಳ್ಳುತ್ತಿದ್ದು, ಜುಲೈ ಎರಡನೆಯ ವಾರದಲ್ಲಿ ಅಂತಿಮ ನಿಯಮಾವಳಿಗಳು ಪ್ರಕಟಗೊಳ್ಳಲಿವೆ. ಆನಂತರ ಇ–ಸ್ವತ್ತು ವಿತರಣೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲು ನಿರ್ಧರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಸಂಬಂಧ ವಿಕಾಸಸೌಧದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ವಿತರಣೆ ಪ್ರಕ್ರಿಯೆಯ ನಿರೀಕ್ಷೆಯಲ್ಲಿದ್ದು, ಸರಳ ಹಾಗೂ ಸುಗಮ ರೀತಿಯಲ್ಲಿ ಇ-ಸ್ವತ್ತು ವಿತರಣೆಯ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಸೂಚನೆ ನೀಡಿದರು.

ವಿಧಾನ ಮಂಡಲದ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುವಾಗುವಂತೆ 199 (ಬಿ) ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಅದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆಯನ್ನು ಸುಗಮಗೊಳಿಸಲು ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಇ-ಸ್ವತ್ತು ಆಸ್ತಿ ನಮೂನೆಗಳನ್ನು ವಿತರಿಸುವುದರಿಂದ ರಾಜ್ಯದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ 1.45 ಕೋಟಿ ಆಸ್ತಿಗಳು ಇ-ಸ್ವತ್ತು ತೆಕ್ಕೆಗೆ ಬರುವ ನಿರೀಕ್ಷೆಯಿದೆ. ಇದರಿಂದ ಸಾರ್ವಜನಿಕರ ಆಸ್ತಿಗಳು ಅಧಿಕೃತಗೊಳ್ಳುವುದಲ್ಲದೆ, ಗ್ರಾಮ ಪಂಚಾಯತಿಗಳ ಆದಾಯ ಹೆಚ್ಚಲಿರುವುದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.

Spread the love

Leave a Reply

Your email address will not be published. Required fields are marked *

error: Content is protected !!