ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರೀಕ್ಷಕರು, ಉಪ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಮಗ್ರ ಸುತ್ತೋಲೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಅಕ್ರಮ ಮರಳು ಗಣಿಗಾರಿಕೆ ಪರಿಸರಕ್ಕೆ ಹಾನಿ ಉಂಟುಮಾಡುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಆದಾಯಕ್ಕೂ ಧಕ್ಕೆ ತರುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸದೆ ‘ಶೂನ್ಯ ಸಹಿಷ್ಣುತೆ’ ನೀತಿಯನ್ನು ಸರ್ಕಾರ ಅನುಸರಿಸುತ್ತಿದ್ದು, ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.
ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ರಾಜ್ಯದ ನೈಸರ್ಗಿಕ ಸಂಪತ್ತಿನ ಲೂಟಿ ಮಾತ್ರವಲ್ಲ, ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸವಾಲು ಎಸೆಯುವ ಗಂಭೀರ ಅಪರಾಧವಾಗಿದೆ. ಸರ್ಕಾರ ಯಾವುದೇ ಅಕ್ರಮ ಚಟುವಟಿಕೆಯನ್ನು ಸಹಿಸುವುದಿಲ್ಲ. ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್ ಫೋರ್ಸ್ಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸುವುದು, ಅಕ್ರಮ ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ತಡೆಯುವುದು ಹಾಗೂ ಕಾನೂನು ಕ್ರಮ ಕೈಗೊಳ್ಳುವುದು ಸಂಬಂಧಿತ ಪೊಲೀಸ್ ಅಧಿಕಾರಿಗಳ ಜವಾಬ್ದಾರಿಯಾಗಿದೆ.
ರಾಜ್ಯದ ಗಡಿ ಪ್ರದೇಶಗಳು ಸೇರಿದಂತೆ ಅಂತರರಾಜ್ಯ ಮಾರ್ಗಗಳಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಗಟ್ಟಲು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತನಿಖಾ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆ ಕಂಡುಬಂದರೆ ಸಂಬಂಧಿತ ಇಲಾಖೆಯ ಗಮನಕ್ಕೆ ತರುವಂತೆ ನಿರ್ದೇಶಿಸಲಾಗಿದೆ.
ಪ್ರತಿ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿರುವ ಅಕ್ರಮ ಮರಳು ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಿ, ಅಗತ್ಯವಿದ್ದಲ್ಲಿ ದಿಢೀರ್ ದಾಳಿ ನಡೆಸಬೇಕು. ಈ ಅಕ್ರಮ ದಂಧೆಯಲ್ಲಿ ನಿರಂತರವಾಗಿ ತೊಡಗಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.
ಪ್ರತಿ ತಿಂಗಳ ಅಪರಾಧ ಪರಿಶೀಲನಾ ಸಭೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆ ಹಾಗೂ ಸಂಗ್ರಹಣೆ ಪ್ರಕರಣಗಳ ಕುರಿತು ಠಾಣಾವಾರು ಪರಿಶೀಲನೆ ನಡೆಸಿ, ಅಧೀನ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು. ಅಲ್ಲದೆ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಗಳನ್ನು ನಿಯಮಿತವಾಗಿ ನಡೆಸಿ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.
ಯಾವುದೇ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ತಡೆಯುವಲ್ಲಿ ವಿಫಲವಾದರೆ, ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಲಾಗುವುದು. ಜೊತೆಗೆ ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧವೂ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಮತ್ತು ಕಾನೂನು ಲೋಪವಾಗದಂತೆ ಕಣ್ಗಾವಲು ಇರಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
