ಚಿತ್ತಾಪುರ ಪುರಷಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸಲು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಕೂಡಲೇ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ತಡೆಯಾಜ್ಞೆ ಇರುವುದರಿಂದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನೆನೆಗುದಿಯಲ್ಲಿತ್ತು. ಆದರೆ ಪ್ರಸ್ತುತ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿ 20 ದಿನಗಳು ಕಳೆದರೂ ಇಲ್ಲಿವರೆಗೆ ಚುನಾವಣೆ ನಡೆಸದೆ ಇರುವುದು ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.
ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಆಗದೆ ಇರುವುದರಿಂದ ಪುರಸಭೆಯಲ್ಲಿ ಹಾಗೂ ಪಟ್ಟಣದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ ಹಾಗೂ ಪಟ್ಟಣದ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ತಿಳಿಸಿದ್ದಾರೆ.
ಕ್ಷೇತ್ರದ ಶಾಸಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪಟ್ಟಣದ ಅಭಿವೃದ್ಧಿ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.