ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ: ದುಗನೂರು
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವಿಂದ್ರರೆಡ್ಡಿ ದುಗನೂರ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ ನೆರವೇರಿಸುವುದರ ಜೊತೆಗೆ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಮೊದಲಿಗೆ ಸ್ಪರ್ಧಿಸುವ ಮನೋಭಾವನೆಯನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು ಕ್ರೀಡೆಯಿಂದ ಆರೋಗ್ಯ ವೃದ್ಧಿ ಹಾಗೂ ಮಾನಸಿಕ ಒತ್ತಡ ನಿವಾರಣೆಯಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಆಸಕ್ತಿ ಕಡಿಮೆಯಾಗುತ್ತಿದ್ದು. ಸಾಮಾಜಿಕ ಜಾಲತಾಣಗಳತ್ತ ಯುವಕರು ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುತ್ತಿದ್ದಾರೆ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸಿ ಜಿಲ್ಲಾ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾಪಂ ಅಧಿಕಾರಿ ಶ್ರೀಮಂತ ಸಂಗಾವಿ, ಕರ್ನಾಟಕ ರಾಜ್ಯ ಮುಸ್ಲಿಂ ನೌಕರರ ಸಂಘ ಅಧ್ಯಕ್ಷ ಮಸ್ತಾನ್ ಪಟೇಲ್, ಕ್ರೀಡಾಂಗಣದ ವ್ಯವಸ್ಥಾಪಕ ಮರಿಯಪ್ಪ ಬೊಮ್ಮನಳ್ಳಿಕರ್, ದೈಹಿಕ ಶಿಕ್ಷಕರಾದ ಭೀಮಾಶಂಕರ, ವೆಂಕಟರೆಡ್ಡಿ, ಸುರೇಶ ರಾಮಪೂರೆ, ವೀರಭದ್ರಪ್ಪ, ವೆಂಕಟೇಶ್ ಅಲ್ಲೂರ, ನಾಗೇಂದ್ರಪ್ಪ ಕಾಶಿ, ಶಿವಕುಮಾರ ಮಠಪತಿ, ತೇಜರಾಜ್, ಶ್ರೀನಾಥ ಸೇರಿದಂತೆ ಇತರರು ಇದ್ದರು.