Oplus_0

ಜೆಡಿಎಸ್‌ ಪಕ್ಷಕ್ಕೆ 25 ವರ್ಷ ಪೂರೈಕೆ, ರಜತ್ ಮಹೋತ್ಸವ | ನ.22 ರಂದು ಬೆಂಗಳೂರಿನಲ್ಲಿ ಸಮಾವೇಶ : ಬಾಲರಾಜ್ ಗುತ್ತೇದಾರ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಜೆಡಿಎಸ್ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ರಜತ್ ಮಹೋತ್ಸವ ಆಚರಿಸಲು ತೀರ್ಮಾನಿಸಿದ್ದು, ನವೆಂಬರ್ 22 ರಂದು ಬೆಂಗಳೂರಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಅದ್ಯಕ್ಷ ಬಾಲರಾಜ್ ಗುತ್ತೇದಾರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ 25 ವರ್ಷ ಪೂರೈಸಿರುವುದು ಹೆಮ್ಮೆಯ ವಿಚಾರ. ಈ ಹಿನ್ನೆಲೆಯಲ್ಲಿ ರಜತ್ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನ.21 (ಶುಕ್ರವಾರ) ಮತ್ತು ನ.22ರಂದು (ಶನಿವಾರ) ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಶುಕ್ರವಾರ ಸಂಜೆ 4.30ಕ್ಕೆ ಪಕ್ಷದ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನಡೆಯಲಿದೆ. ಸಂಜೆ 5 ಗಂಟೆಗೆ ಕಳೆದ 25 ವರ್ಷಗಳಲ್ಲಿ ಪಕ್ಷ ಬೆಳೆದು ಬಂದ ಹಾದಿ, ಪಕ್ಷದ ನಾಯಕರು ಮಾಡಿದ ಸಾಧನೆಗಳು, ಜನಪರ ಕಾರ್ಯಗಳ ಕುರಿತು ವಸ್ತುಪ್ರದರ್ಶನ ಜರುಗಲಿದೆ. ಸಂಜೆ 6.30ಕ್ಕೆ ದೇಶದ ವಿವಿಧ ರಾಜ್ಯಗಳಿಂದ ಬರುವ ಪಕ್ಷದ ಮುಖಂಡರ ಸಭೆ ಜರುಗಲಿದೆ. ಈ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಶನಿವಾರ ಬೆಳಗ್ಗೆ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ರಜತ್ ಮಹೋತ್ಸವದ ಸಮಾವೇಶ ನಡೆಯಲಿದೆ. ಮಾಜಿ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಉದ್ಘಾಟಿಸಲಿದ್ದಾರೆ.

ಈ ಸಮಾವೇಶದಲ್ಲಿ ರಾಜ್ಯದ ವಿವಿಧೆಡೆ ಯಿಂದ ಬರುವ ಸಾವಿರಾರು ಕಾರ್ಯಕರ್ತರು, ಮುಖಂಡರು ಹಾಗೂ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಪಕ್ಷದ ರಾಷ್ಟ್ರೀಯ ಪರಿಷತ್ ಹಾಗೂ ರಾಜ್ಯ ಪರಿಷತ್‌ನ ಸಭೆ ಜರುಗಲಿದೆ. ಇದರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.

ಜನವರಿ ತಿಂಗಳಲ್ಲಿ ಬೃಹತ್ ಸಮಾವೇಶ :

ಜನವರಿ ಅಂತ್ಯದಲ್ಲಿ ದೊಡ್ಡ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಈ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಲಕ್ಷಾಂತರ ಕಾರ್ಯಕರ್ತರು ಹಾಗೂ ಮುಖಂಡರು ಆಗಮಿಸಲಿದ್ದಾರೆ. ಈ ಸಮಾವೇಶದ ಮೂಲಕ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಿಂದ ಹಿಡಿದು ವಿಧಾನಸಭೆ, ಲೋಕಸಭಾ ಚುನಾವಣೆಗಳಿಗೆ ಸಿದ್ಧತೆ ಕುರಿತು ಸಂದೇಶ ನೀಡಲಾಗುವುದು ಎಂದರು.

ಪಕ್ಷಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 1ರಿಂದ ಜನವರಿ 15ರ ವರೆಗೆ ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ರಜತ್ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ. 45 ದಿನಗಳ ಕಾಲ ರಜತ್ ಮಹೋತ್ಸವ ಜರುಗಲಿದೆ. ಈ ಸಂಬಂಧ ಪಕ್ಷದ ತಾಲೂಕು ಮತ್ತು ಜಿಲ್ಲಾ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವುಕುಮಾರ ನಾಟೀಕಾರ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಬಿರಬಟ್ಟಿ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!