ಕಲಬುರಗಿ ಜಿಲ್ಲೆಯಲ್ಲಿ ₹25 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಸಚಿವ ಸಂಪುಟದ ಅನುಮೋದನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹25 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದು ಸಂತಸದ ವಿಷಯ ಎಂದು ಗೃಹ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಯೋಜನೆಯಡಿ ಒಟ್ಟು 20.65 ಕಿಲೋಮೀಟರ್ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾಜ್ಯ ಹೆದ್ದಾರಿ–156ರ ಕಟ್ಟಿಸಂಗವಿ–ಯನಗುಂಟಿ–ನರಿಬೋಳ–ಮಾಲ್-ಕೆ ಕ್ರಾಸ್ ಮಾರ್ಗದ 9.045 ಕಿಲೋಮೀಟರ್ ರಸ್ತೆ ಹಾಗೂ ಕೆಲ್ಲೂರು–ಆಂದೋಲಾ ಜಿಲ್ಲಾ ಮುಖ್ಯ ರಸ್ತೆಯ 3.900 ಕಿಲೋ ಮೀಟರ್ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಪ್ರಸ್ತುತ 3.75 ಮೀಟರ್ ಅಗಲವಿರುವ ರಸ್ತೆಯನ್ನು ಆಯ್ದ ಭಾಗಗಳಲ್ಲಿ 5.5 ಮೀಟರ್ ಅಗಲಕ್ಕೆ ವಿಸ್ತರಿಸಿ ಗುಣಮಟ್ಟದ ರಸ್ತೆ ನಿರ್ಮಿಸಲಾಗುತ್ತದೆ ಎಂದು ಅವರು ಹೇಳಿದರು.
“ಉತ್ತಮ ರಸ್ತೆ ಎಂದರೆ ಅದು ಕೇವಲ ಸಂಚಾರದ ಸೌಲಭ್ಯವಲ್ಲ, ಅದು ಗ್ರಾಮೀಣಾಭಿವೃದ್ಧಿಯ ಬೆನ್ನೆಲುಬು. ಗುಣಮಟ್ಟದ ರಸ್ತೆ ನಿರ್ಮಾಣದಿಂದ ಜನರ ಜೀವನಮಟ್ಟ ಸುಧಾರಿಸುತ್ತದೆ, ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುತ್ತದೆ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ವೇಗವಾದ ಸಂಚಾರದ ವ್ಯವಸ್ಥೆ ದೊರೆಯುತ್ತದೆ. ಇದು ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೂ ಹೊಸ ಚೈತನ್ಯ ನೀಡಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ರಸ್ತೆ ಅಭಿವೃದ್ಧಿಯಿಂದ ಕಡಕೋಳ, ಕಟ್ಟಿಸಂಗಾವಿ, ನರಿಬೋಳ, ಕೆಲ್ಲೂರು ಹಾಗೂ ಆಂದೋಲಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಜನರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ದೊರೆಯಲಿದ್ದು, ಈ ಭಾಗದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲ ಭಾಗಗಳಿಗೂ ಸಮಾನ ಅಭಿವೃದ್ಧಿ ತಲುಪಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸುವ ಕಾರ್ಯ ಮುಂದುವರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

