ಮಾ.8 ರಂದು ಚಿತ್ತಾಪುರಕ್ಕೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಖರ್ಗೆ ಆಗಮನ | ರೂ.1,085 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ: ಸಚಿವ ಪ್ರಿಯಾಂಕ್ ಖರ್ಗೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಜಿಲ್ಲೆಯ ರಾಜಕೀಯ ಮತ್ತು ಅಭಿವೃದ್ಧಿಯ ಕೇಂದ್ರಬಿಂದುವಾಗಿರುವ ಚಿತ್ತಾಪುರ ಕ್ಷೇತ್ರವು ಇದೇ ಮಾರ್ಚ್ 8 ರಂದು ಒಂದು ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಕ್ಷೇತ್ರದ ಇತಿಹಾಸದಲ್ಲೇ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸುಮಾರು ರೂ.1,085 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಂದು ಚಾಲನೆ ದೊರೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಹೈಕಮಾಂಡ್ ನಾಯಕರ ಸಮಾಗಮ:
ಮಾರ್ಚ್ 8 ರಂದು ನಡೆಯಲಿರುವ ಈ ಬೃಹತ್ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಗಣ್ಯರ ದಂಡೇ ಹರಿದು ಬರಲಿದೆ. ರಾಜ್ಯಸಭಾ ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಏಕಕಾಲಕ್ಕೆ ಕ್ಷೇತ್ರದಲ್ಲಿ ಉಪಸ್ಥಿತರಿರಲಿದ್ದು, ಜನಪ್ರಿಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದು ಕ್ಷೇತ್ರದ ಅಭಿವೃದ್ಧಿಯ ಹಬ್ಬವಾಗಲಿದೆ ಎಂದು ಸಚಿವರು ಬಣ್ಣಿಸಿದ್ದಾರೆ.
ಕೋಟಿ ಕೋಟಿ ಅನುದಾನ: ಯಾವುದಕ್ಕೆ ಎಷ್ಟು?
ಅಭಿವೃದ್ಧಿಯ ಮಂತ್ರ ಜಪಿಸುತ್ತಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಯೋಜನೆಗಳ ನೀಲನಕ್ಷೆಯನ್ನು ಬಿಚ್ಚಿಟ್ಟಿದ್ದಾರೆ:
ಶಂಕುಸ್ಥಾಪನೆ: ಸುಮಾರು ರೂ.1,000 ಕೋಟಿ ವೆಚ್ಚದ ಹೊಸ ಕಾಮಗಾರಿಗಳಿಗೆ ಅಡಿಗಲ್ಲು ಹಾಕುವ ಮೂಲಕ ಕ್ಷೇತ್ರದ ಚಿತ್ರಣವನ್ನೇ ಬದಲಿಸಲು ಸಿದ್ಧತೆ ನಡೆಸಲಾಗಿದೆ.
ಲೋಕಾರ್ಪಣೆ: ಈಗಾಗಲೇ ಯುದ್ಧೋಪಾದಿಯಲ್ಲಿ ಪೂರ್ಣಗೊಂಡಿರುವ ರೂ.85 ಕೋಟಿ ಮೊತ್ತದ ವಿವಿಧ ಜನಪರ ಯೋಜನೆಗಳನ್ನು ಅಂದೇ ಸಾರ್ವಜನಿಕರ ಸೇವೆಗೆ ಅರ್ಪಿಸಲಾಗುವುದು.
ಅಧಿಕಾರಿಗಳಿಗೆ ಪ್ರಿಯಾಂಕ್ ‘ಟಾಸ್ಕ್’
ಈ ಐತಿಹಾಸಿಕ ಕಾರ್ಯಕ್ರಮವು ಅತ್ಯಂತ ಅಚ್ಚುಕಟ್ಟಾಗಿ ನಡೆಯಬೇಕೆಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಡಳಿತದ ಸಭೆಯಲ್ಲಿ ಮಾತನಾಡಿದ ಅವರು, “ಇಲಾಖೆಗಳ ನಡುವೆ ಸಮನ್ವಯದ ಕೊರತೆ ಇರಬಾರದು. ಯಾವುದೇ ಲೋಪವಾಗದಂತೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

