ಮುನಿಯಪ್ಪ, ಬಸವಂತಪ್ಪ ಅವರಿಗೆ ಸಚಿವ ಸ್ಥಾನ | ಕಾಳಗಿ ತಾಲೂಕು ಮಾದಿಗ ಸಮಾಜದ ಮುಖಂಡರು ಹರ್ಷ
ನಾಗಾವಿ ಎಕ್ಸಪ್ರೆಸ್
ಕಾಳಗಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾ ಬಂದಿರುವ ಕೆ.ಎಚ್. ಮುನಿಯಪ್ಪ ಹಾಗೂ ಕೆ.ಎಸ್. ಬಸವಂತಪ್ಪ ಅವರಿಗೆ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿರುವುದಕ್ಕೆ ಕಾಳಗಿ ತಾಲೂಕು ಮಾದಿಗ ಸಮಾಜದ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೆ.ಎಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಸಚಿವ ಖಾತೆ ಹಾಗೂ ಕೆ.ಎಸ್. ಬಸವಂತಪ್ಪ ಅವರಿಗೆ ಮೀನುಗಾರಿಕೆ, ಬಂದರು ಮತ್ತು ಮುಜರಾಯಿ ಖಾತೆ ನೀಡಿರುವುದು ಪಕ್ಷದ ಹಿರಿಯ ನಾಯಕರು ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ನೀಡಿದ ಗೌರವವಾಗಿದೆ ಎಂದು ರೇವಣಸಿದ್ದಪ್ಪ ಕಟ್ಟಿಮನಿ, ಸುಂದರ್ ಡಿ. ಸಾಗರ್ ಅವರು ತಿಳಿಸಿದ್ದಾರೆ.
ದೀರ್ಘಕಾಲದಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾಯಕರಿಗೆ ಅವರ ಅನುಭವ, ಪಕ್ಷ ನಿಷ್ಠೆ ಹಾಗೂ ಸೇವೆಯನ್ನು ಗುರುತಿಸಿ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಇದರಿಂದ ರಾಜ್ಯದ ವಿವಿಧ ಭಾಗಗಳಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿಂದುಳಿದ, ಶೋಷಿತ ಮತ್ತು ಸಾಮಾಜಿಕವಾಗಿ ದುರ್ಬಲ ವರ್ಗಗಳಲ್ಲಿ ಹೊಸ ಭರವಸೆ ಮೂಡಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿತನ, ಪಕ್ಷದ ಮೇಲಿನ ನಿಷ್ಠೆ ಹಾಗೂ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ ಇಬ್ಬರು ನಾಯಕರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಿರುವ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಾಗೂ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್, ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೂ ಕಾಳಗಿ ತಾಲೂಕು ಮಾದಿಗ ಸಮುದಾಯದ ವತಿಯಿಂದ ಕೃತಜ್ಞತೆಗಳು ಸಲ್ಲಿಸಿದ್ದಾರೆ.
ಮುಂದಿನ ದಿನಗಳಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಕೆ.ಎಸ್. ಬಸವಂತಪ್ಪ ಅವರು ತಮ್ಮ ತಮ್ಮ ಖಾತೆಗಳ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ, ವಿಶೇಷವಾಗಿ ದಲಿತ, ಶೋಷಿತ, ಬಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಳಗಿ ತಾಲೂಕು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಜನರ ಬೇಡಿಕೆಗಳಿಗೂ ಸ್ಪಂದಿಸಬೇಕು ಎಂದು ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.
ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಕೆ.ಎಸ್. ಬಸಂತಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಮುಖಂಡರು, ಮುಂದಿನ ದಿನಗಳಲ್ಲಿ ಇಬ್ಬರು ನಾಯಕರು ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸಿ, ತಮ್ಮ ಖಾತೆಗಳ ಮೂಲಕ ಉತ್ತಮ ಆಡಳಿತ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಾದಿಗ ಸಮುದಾಯದ ಹಿರಿಯ ಮುಖಂಡರಾದ ರೇವಣಸಿದ್ದಪ್ಪ ಕಟ್ಟಿಮನಿ, ಸುಂದರ್ ಡಿ. ಸಾಗರ್, ಹರೀಶ್ ಸಿಂಗೆ, ಮಲ್ಲಿಕಾರ್ಜುನ್ ಸಿಂಗೆ, ಕೃಷ್ಣ ಕಟ್ಟಿಮನಿ, ಮಹೇಶ್ ಕಟ್ಟಿಮನಿ, ಕೃಷ್ಣ ಕಟ್ಟಿಮನಿ ಬೆಡಸೂರ್, ರೇವಣಸಿದ್ದಪ್ಪ ಕೊಡ್ಲಿ, ಸಚಿನ್ ಕೊಡದೂರ ಸೇರಿದಂತೆ ಅನೇಕ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಸಚಿವರಾದ ಕೆ.ಎಚ್. ಮುನಿಯಪ್ಪ ಹಾಗೂ ಕೆ.ಎಸ್. ಬಸಂತಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ ಮುಖಂಡರು, ಮುಂದಿನ ದಿನಗಳಲ್ಲಿ ಇಬ್ಬರು ನಾಯಕರು ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸಿ, ತಮ್ಮ ಖಾತೆಗಳ ಮೂಲಕ ಉತ್ತಮ ಆಡಳಿತ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

