ಮುತ್ತಗಾ ಅಂಬಿಗರ ಚೌಡಯ್ಯ ಮೂರ್ತಿ ವಿರೂಪಗೊಳಿಸಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿ ಪಡಿಸಲು ಎಂಎಲ್ಸಿ ಜಗದೇವ ಗುತ್ತೇದಾರ ಆಗ್ರಹ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಹೇಯ ಕೃತ್ಯವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ರವರು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚಿ ಅವರಿಗೆ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರು 12ನೇ ಶತಮಾನದಲ್ಲಿ ವಚನ ಕ್ರಾಂತಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿ ಕೇವಲ ಒಂದು ಜಾತಿ ಧರ್ಮಕ್ಕೆ ಸೀಮಿತವಾಗಿರದೇ ಮನುಕುಲಕ್ಕೆ ಆದರ್ಶಪ್ರಾಯರಾಗಿ ಶರಣರೆನಿಸಿಕೊಂಡಿದ್ದಾರೆ. ಇಂತಹ ಶರಣರ ಪ್ರತಿಮೆ ವಿರೂಪಗೊಳಿಸಿರುವ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.

