ಮುತ್ತಗಾ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡುವಂತೆ ಶಿವುಕುಮಾರ ಯಾಗಾಪೂರ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮತಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಕಠಿಣವಾದ ಕಾನೂನು ಕ್ರಮ ಕೈಗೊಂಡು ಅವರನ್ನು ಗಡಿಪಾರು ಮಾಡಬೇಕು ಎಂದು ಕೋಲಿ ಸಮಾಜದ ತಾಲೂಕು ಅಧ್ಯಕ್ಷ ಶಿವುಕುಮಾರ ಯಾಗಾಪೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಶುಕ್ರವಾರ ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿದ ನಂತರ ಭಂಕೂರ ಕ್ರಾಸ್ ಹತ್ತಿರ ಕೋಲಿ ಸಮಾಜದ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ. ಕಿಡಿಗೇಡಿಗಳನ್ನು ಬಂಧಿಸುವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪದೇ ಪದೇ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರು ಸೇರಿದಂತೆ ಮಹಾಪುರುಷರ ಮೇಲೆ ಮೇಲಿಂದ ಮೇಲೆ ಅವಮಾನಿಸುವ ಘಟನೆಗಳು ನಡೆಯುತ್ತಿವೆ, ಇದು ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಮಾಡುವ ಹುನ್ನಾರ ಅಡಗಿದೆ ಎಂದು ತಿಳಿಸಿದ್ದಾರೆ.
ಮಹಾಪುರುಷರು ಯಾವುದೇ ಒಂದು ಸಮಾಜಕ್ಕೆ ಸೀಮಿತವಾಗಿರುವುದಿಲ್ಲ, ಮಹಾಪುರುಷರನ್ನು ಎಲ್ಲಾ ಸಮಾಜದವರು ಗೌರವಿಸುತ್ತಾರೆ. ಮುತ್ತಗಾ ಗ್ರಾಮದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವುದು ಭಾವನತ್ಮಕವಾಗಿ ಕೋಲಿ-ಕಬ್ಬಲಿಗ ಸಮಾಜಕ್ಕೆ ನೇರವಾಗಿ ದಾಳಿ ಮಾಡಿದಂತಾಗಿದೆ ಎಂದು ತಿಳಿಸಿದ್ದಾರೆ.
ಈ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವ ಸಮಾಜ ಘಾತುಕ ವ್ಯಕ್ತಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

