Oplus_0

371(ಜೆ) ಕಲ್ಯಾಣ ಕರ್ನಾಟಕದ ಸಂಜೀವಿನಿ, ಎನ್.ರವಿಕುಮಾರ್ ಹೇಳಿಕೆ ಹಾಸ್ಯಾಸ್ಪದ: ಮಲ್ಲಿಕಾರ್ಜುನ ಕಾಳಗಿ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಕಲ್ಯಾಣ ಕರ್ನಾಟಕದ ಜನರ ಪಾಲಿಗೆ ಸಂಜೀವಿನಿಯಾಗಿರುವ ಸಂವಿಧಾನದ 371(ಜೆ) ಕಲಂ ಉಪಯೋಗಕ್ಕೆ ಬಾರದು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಚುನಾವಣೆ ಗಿಮಿಕ್ ಗಾಗಿ ಜನರ ದಾರಿ ತಪ್ಪಿಸುವ ಕೆಲಸ ಎಂದು ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಎನ್.ರವಿಕುಮಾರ್ ಅವರು 371(ಜೆ) ಯಿಂದ ಯಾವುದೇ ಪ್ರಯೋಜನ ಆಗಿಲ್ಲ ಎಂದು ಹೇಳಿರುವುದು ಅವರ ಬುದ್ಧಿಮಟ್ಟ ಮತ್ತು ಅಜ್ಞಾನವನ್ನು ತೋರಿಸುತ್ತದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ, ಉದ್ಯೋಗದಲ್ಲಿ ಮೀಸಲಾತಿ ಸಿಕ್ಕಿರುವುದು 371(ಜೆ) ನಿಂದಲೇ. ಕಲಬುರಗಿಯಲ್ಲಿ ಸರ್ಕಾರಿ ಉದ್ಯೋಗ, ವೈದ್ಯಕೀಯ, ಇಂಜಿನಿಯರಿಂಗ್ ಸೀಟುಗಳಲ್ಲಿ ನಮ್ಮ ಮಕ್ಕಳಿಗೆ ಅವಕಾಶ ಸಿಕ್ಕಿದ್ದು ಈ ಕಾಯ್ದೆಯಿಂದ, ಇದನ್ನು ಉಪಯೋಗಕ್ಕೆ ಬಾರದು ಎನ್ನುವುದು ಈ ಭಾಗದ ಜನರಿಗೆ ಮಾಡುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.

371(ಜೆ) ಕಲಂ ಬಗ್ಗೆ ಹಗುರವಾಗಿ ಮಾತನಾಡಿದ ಎನ್.ರವಿಕುಮಾರ ಕೂಡಲೇ ಕಲ್ಯಾಣ ಕರ್ನಾಟಕ ಭಾಗದ ಜನರ ಕ್ಷಮೆ ಯಾಚಿಸಬೇಕು ಇಲ್ಲದಿದ್ದರೆ ಕಂಡಲ್ಲಿ ಘೇರಾವ್ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು. ಎನ್ ರವಿಕುಮಾರ್ ಬಿಜೆಪಿ ನಾಯಕರ ಮೆಚ್ಚುಗೆ ಪಡೆಯಲು ಹಾಗೂ ತಮ್ಮ ಎಂಎಲ್ಸಿ ಸ್ಥಾನದ ಖುರ್ಚಿ ಭದ್ರ ಮಾಡಿಕೊಳ್ಳಲು ವಿನಾಕಾರಣ ಕಾಂಗ್ರೆಸ್ ಹಾಗೂ ಖರ್ಗೆ ಕುಟುಂಬದ ವಿರುದ್ಧ ಹೇಳಿಕೆ ನೀಡುತ್ತಾ ತಿರುಗಾಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಹಿಂದೆ ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ಜ ರವಿಕುಮಾರ್, ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲು ಕಲಬುರಗಿ ಜಿಲ್ಲೆಗೆ ಬಂದು ಇಲ್ಲಸಲ್ಲದ ಹೇಳಿಕೆ ನೀಡಿ ವಿವಾದ ಸೃಷ್ಟಿಸುತ್ತಾರೆ ಇದೇ ಅವರ ಕಾಯಕವಾಗಿದೆ ಎಂದು ಕುಟುಕಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 371(ಜೆ)ಗೆ ಹೆಚ್ಚಿನ ಅನುದಾನ, ವಿಶೇಷ ಮೀಸಲಾತಿ ನಿಯಮಗಳನ್ನು ಜಾರಿಗೆ ತಂದು ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಭಾಗದ ಅಭಿವೃದ್ಧಿಗೆ ಏನು ಮಾಡಿದೆ ಎಂದು ಮಲ್ಲಿಕಾರ್ಜುನ ಕಾಳಗಿ ಅವರು ಖಾರವಾಗಿ ಪ್ರಶ್ನಿಸಿದರು.

ಶಿಕ್ಷಕರ ನೇಮಕಾತಿಯಲ್ಲಿ 45 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿ, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ, ಕೆಕೆಆರ್ ಡಿಬಿ ಮೂಲಕ ಕೋಟ್ಯಂತರ ಅನುದಾನ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಸರ್ಕಾರ, ಬಿಜೆಪಿ ನಾಯಕರು ಚುನಾವಣೆ ಬಂದಾಗ ಮಾತ್ರ ಕಲ್ಯಾಣ ಕರ್ನಾಟಕದ ನೆನಪು ಮಾಡಿಕೊಂಡು, ಸುಳ್ಳು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಯಿಂದ ಯಾವುದೇ ಅಭಿವೃದ್ಧಿ ಆಗಿಲ್ಲ ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಹೀಗಾಗಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಅಭಿವೃದ್ಧಿಯ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರಿಗೆ ಪ್ರಜ್ಞಾವಂತ ಶಿಕ್ಷಕ ಮತದಾರರು ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Spread the love

Leave a Reply

Your email address will not be published. Required fields are marked *

error: Content is protected !!