Oplus_131072

ನಾಲವಾರದ ಶ್ರೀ ಕೋರಿಸಿದ್ಧೇಶ್ವರ ಸಂಸ್ಥಾನದಲ್ಲಿ ನಡೆಯುವ ವಿಶಿಷ್ಠ ಉತ್ಸವ, ಮಧ್ಯರಾತ್ರಿಯಲ್ಲಿ ತನಾರತಿ ಹರಕೆ ಸಲ್ಲಿಸಿದ ಭಕ್ತಸಾಗರ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವದ ಪ್ರಯುಕ್ತ ಬುಧವಾರ ಮಧ್ಯರಾತ್ರಿ ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ ಉತ್ಸವವು ಸಹಸ್ರಾರು ಭಕ್ತರ ಮಧ್ಯೆ ಭಕ್ತಿ ಭಾವದಿಂದ ನೆರವೇರಿತು.

ದಕ್ಷಿಣ ಭಾರತದ ಮಹಾದೀಪಮೇಳವೆಂದೇ ಪ್ರಖ್ಯಾತವಾದ ನಾಲವಾರದ ತನಾರತಿ ಉತ್ಸವವು, ಇಷ್ಟಾರ್ಥಗಳು ಈಡೇರಿದ ಪ್ರಯುಕ್ತ ಕೃತಜ್ಞತೆಯ ರೂಪದಲ್ಲಿ ಕರ್ತೃ ಕೋರಿಸಿದ್ಧೇಶ್ವರ ರ ಗದ್ದುಗೆಗೆ ಸಲ್ಲಿಸುವ ಹರಕೆಯಾಗಿದ್ದು, ದೇಶದ ವಿವಿಧ ಭಾಗಗಳ ಸಾವಿರಾರು ಸದ್ಭಕ್ತರು ಪಾಲ್ಗೊಂಡು ಹರಕೆ ತೀರಿಸುತ್ತಾರೆ.

ಪೀಠಾಧಿಪತಿಗಳಾದ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಶ್ರೀಮಠದ ಪಾರಂಪರಿಕ ಉಡುಪು ಧರಿಸಿ ಉತ್ಸವದ ನೇತೃತ್ವ ವಹಿಸಿದ್ದರು. ಅವರ ಹಿಂದೆ ಸಾವಿರಾರು ಸದ್ಭಕ್ತರು ವಿಶೇಷವಾಗಿ ತಯಾರಿಸಿದ ಹಣತೆಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮಠದ ಸುತ್ತಲೂ ಐದು ಸುತ್ತು ಪ್ರದಕ್ಷಿಣೆ ಹಾಕಿದರು.

ಪುರವಂತಿಕೆ, ಪೂರ್ಣಕುಂಭ, ಭಾಜಾ-ಭಜಂತ್ರಿ, ವೈದಿಕರ ವೇದಘೋಷಗಳ ಮಧ್ಯೆ ನಡೆದ ಈ ಉತ್ಸವ ಮಧ್ಯರಾತ್ರಿ ಪ್ರಾರಂಭವಾಗಿ ಬೆಳಗಿನ ಜಾವದ ವರೆಗೂ ನಡೆಯಿತು.

ಮಧ್ಯರಾತ್ರಿ ಸ್ನಾನಾದಿಗಳನ್ನು ಪೂರೈಸಿಕೊಂಡು, ಗದ್ದುಗೆಗೆ ನಮಿಸಿ, ಗೋದಿಹಿಟ್ಟಿನಿಂದ ವಿಶೇಷ ಪ್ರಣತೆಗಳನ್ನು ತಯಾರಿಸಿ ಅದರಲ್ಲಿ ಜ್ಯೋತಿ ಪ್ರಜ್ವಲಿಸಿ ಮಹಾಗುರುವಿಗೆ ಬೆಳಗಿ ಭಕ್ತರು ಧನ್ಯತೆಯನ್ನು ಅನುಭವಿಸಿದರು.

ಭಕ್ತರು ಬೇಡಿಕೊಂಡ ಇಷ್ಟಾರ್ಥಗಳು ಈಡೇರಿದ ನಂತರ ತನಾರತಿ ಹರಕೆಯನ್ನು ಸಲ್ಲಿಸುವ ಪರಂಪರೆ ಕಳೆದ ಮೂರು ಶತಮಾನಗಳಿಂದಲೂ ಶ್ರೀಮಠದಲ್ಲಿ ನಡೆಯುತ್ತಾ ಬಂದಿದ್ದು ನಾಲವಾರ ಶ್ರೀಮಠದ ಪಾರಂಪರಿಕ ಉತ್ಸವವಾಗಿದೆ.

ತನಾರತಿ ಸಂದರ್ಭದಲ್ಲಿ ದೀಪಗಳ ಸಾಲು ನದಿಯ ರೀತಿ ಹರಿಯುವ ದೃಶ್ಯ ಕಣ್ಮನ ಸೆಳೆಯುತ್ತದೆ. ಈ ರೀತಿಯ ವೈಶಿಷ್ಟ್ಯ ಪೂರ್ಣ ಉತ್ಸವ ನಾಡಿನ ಯಾವುದೇ ಭಾಗದಲ್ಲಿ ಕಾಣಸಿಗುವುದಿಲ್ಲ. ಅದು ನಾಲವಾರ ಸುಕ್ಷೇತ್ರದಲ್ಲಿ ಮಾತ್ರ ಎಂದು ಮಠದ ವಕ್ತಾರ ಮಹಾದೇವ ಗಂವಾರ್ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!