ಪ್ರವಾಹ ಪೀಡಿತ ಹಳೆ ಹೆಬ್ಬಾಳ ಗ್ರಾಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪರಿಶೀಲನೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮಳೆ ಹಾಗೂ ಪ್ರವಾಹ ಪೀಡಿತ ಮತಕ್ಷೇತ್ರದ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು, ಮಳೆ ತುಸು ಕಡಿಮೆಯಾದ ನಂತರ ಗ್ರಾಮಕ್ಕೆ ಭೇಟಿ ನೀಡಿ ಬೇಡಿಕೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಗ್ರಾಮದ ಸ್ಥಳಾಂತರಕ್ಕೆ ತಾವು ಮುಂದಾಗಿರುವುದಾಗಿ ಹೇಳಿದ ಸಚಿವರು, ಎಷ್ಟು ಕುಟುಂಬಗಳು ಸ್ಥಳಾಂತರಗೊಳ್ಳಬೇಕು ಎನ್ನುವ ಬಗ್ಗೆ ತೀರ್ಮಾನಿಸುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.
ಈ ನಡುವೆ ಗ್ರಾಮಸ್ಥರೊಂದಿಗೆ ಗ್ರಾಮಸಭೆ ನಡೆಸುವಂತೆ ಸ್ಥಳದಲ್ಲಿದ್ದ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಎಸಿ ಸಾಹಿತ್ಯ ಅವರಿಗೆ ಸೂಚಿಸಿದರು.
ಗ್ರಾಮಸ್ಥರಿಗೆ ಬೇಕಾಗುವ ಸೌಲಭ್ಯ ಒದಗಿಸುವಂತೆ ಕಾಳಗಿ ತಹಸೀಲ್ದಾರಗೆ ಸೂಚಿಸಿದರು. ನಿರಂತರ ಮಳೆಯಿಂದ ಬೆಣ್ಣೆತೊರ ಜಲಾಶಯದಿಂದ ನೀರು ಹರಿಬಿಟ್ಟಿದ್ದರಿಂದ ಹಳೆ ಹೆಬ್ಬಾಳ ಗ್ರಾಮಕ್ಕೆ ನೀರು ನುಗ್ಗಿದ್ದರಿಂದ ಗ್ರಾಮಸ್ಥರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಎಸ್ಪಿ ಅಡ್ಡೂರು ಶ್ರೀನಿವಾಸಲು, ಜಿಪಂ ಸಿಇಓ ಭಂವರಸಿಂಗ್ ಮೀನಾ, ಡಿವೈಎಸ್ಪಿ ಶಂಕರಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ರಾಜೇಶ್ ಗುತ್ತೇದಾರ, ಗ್ರಾಪಂ ಮಾಜಿ ಅಧ್ಯಕ್ಷ ಜಯಪ್ರಕಾಶ್ ಕಮಕನೂರ ಸೇರಿದಂತೆ ಇತರರು ಇದ್ದರು.

