ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿಯಾಗಿ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ ಗೆ ಹಡಪದ ಸಮಾಜ ಮನವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಈಗಾಗಲೇ ವಿವಿಧ ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿ ಅನುಭವ ಹೊಂದಿರುವ, ಕಾಂಗ್ರೆಸ್ ಹೈಕಮಾಂಡ್ ನಿಂದ ಹಾಗೂ ಸಿದ್ದರಾಮಯ್ಯ ಸರ್ಕಾರದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಮತ್ತು ಅಪಾರ ಜನಮನ್ನಣೆ ಪಡೆದ ಕಾರಣ ಇವರನ್ನು ರಾಜ್ಯದ ಡಿ.ಕೆ.ಶಿವುಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಹಡಪದ ಸಮಾಜದ ತಾಲೂಕು ಅಧ್ಯಕ್ಷ ರಮೇಶ ಹಡಪದ ಕೊಲ್ಲೂರು, ಪ್ರಧಾನ ಕಾರ್ಯದರ್ಶಿ ಕಲ್ಯಾಣಿ ಗುಂಡಗುರ್ತಿ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಪ್ರಗತಿಗೆ ಹಾಗೂ ದಲಿತ ಮತ್ತು ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಟಿಯಿಂದ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಅತ್ಯಂತ ಸೂಕ್ತ. ಮುಂಬರುವ ದಿನಗಳಲ್ಲಿ ಪಕ್ಷ ಹಾಗೂ ಸರ್ಕಾರವನ್ನು ಮತ್ತಷ್ಟು ಬಲಪಡಿಸಲು ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸಮಾಜ ಕಲ್ಯಾಣ, ಪ್ರವಾಸೋದ್ಯಮ, ಐಟಿಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮರ್ಥವಾಗಿ ನಿರ್ವಹಿಸಿದ್ದಾರೆ. ಹೀಗಾಗಿ ನೂತನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ನಾಂದಿ ಹಾಡಬೇಕು ಎಂದು ತಿಳಿಸಿದ್ದಾರೆ.

