ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯಾಗಿ ಮಾಡುವಂತೆ ಮಲ್ಲಿಕಾರ್ಜುನ ಕಾಳಗಿ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕರ್ನಾಟಕ ರಾಜ್ಯದಲ್ಲಿ ಬದಲಾದ ಡಿ.ಕೆ.ಶಿವುಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಿಯಾಂಕ್ ಖರ್ಗೆ ಅವರು ಮತಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಮೂರು ಬಾರಿ ಸಚಿವರಾಗಿ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ರಾಜ್ಯ ಕಂಡ ಅಪರೂಪದ ಸಚಿವರಾಗಿದ್ದು, ಅಧಿವೇಶನದಲ್ಲಿ ಪ್ರತಿ ಪಕ್ಷಗಳ ನಾಯಕರಿಗೆ ಖಡಕ್ ಆಗಿ ಅಂಕಿ ಸಂಖ್ಯೆಗಳ ಸಮೇತ ಸ್ವಷ್ಟ ಉತ್ತರ ನೀಡುವ ಸಮರ್ಥರು, ಅಧ್ಯಯನ ಶೀಲರು ಹಾಗೂ ಅನುಭವಿಗಳಾಗಿದ್ದಾರೆ ಹೀಗಾಗಿ ಇವರನ್ನು ಡಿಸಿಎಂ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ನೇರ ದಿಟ್ಟ ನಿರಂತರಕ್ಕೆ ಹೆಸರಾದವರು ಹಾಗೂ ಬುದ್ಧ ಬಸವ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡ ಪ್ರಬುದ್ಧ ರಾಜಕಾರಣಿಯಾಗಿದ್ದು, ಎಲ್ಲ ಜಾತಿ ಜನಾಂಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗುವ ಹಾಗೂ ದಿನ ದಲಿತರ, ಬಡವರ, ರೈತರ, ಕಾರ್ಮಿಕರ, ವಿದ್ಯಾರ್ಥಿಗಳ, ಮಹಿಳೆಯರ ಪರ ಅಪಾರ ಕಾಳಜಿಯುಳ್ಳವರಾಗಿದ್ದು, ಎಲ್ಲ ವರ್ಗಗಳ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮವಹಿಸುತ್ತಿದ್ದಾರೆ. ಹೀಗಾಗಿ ಪ್ರಿಯಾಂಕ್ ಖರ್ಗೆ ಅವರಿಗೆ ಉಪ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ಇದೆ ಹಾಗೂ ರಾಜ್ಯವನ್ನು ಮುನ್ನೆಡೆಸಿಕೊಂಡು ಹೋಗುವ ಸಾಮರ್ಥ್ಯ ಇದೆ ಎಂದು ತಿಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ಕ್ಷೇತ್ರಕ್ಕೆ ಬಂದ ಮೇಲೆ ಅಭಿವೃದ್ಧಿಯ ಚಿತ್ರಣವೇ ಬದಲಾಗಿದೆ, ಅಷ್ಟೇ ಅಲ್ಲ ಕಲಬುರಗಿ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಕಂಡಿದೆ ಹೀಗಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಹೊಂದಲು ಇವರನ್ನು ಡಿಸಿಎಂ ಮಾಡಬೇಕು. ಇದರಿಂದ ಇಲ್ಲಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀಕಾಂತ್ ಹೊಸಳ್ಳಿ, ಶಿವುಕುಮಾರ ಯಾದಗಿರಿ ಇದ್ದರು.

