ಕಲಬುರಗಿ ಸೆ.17ರಂದು ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಯಲ್ಲಾಲಿಂಗ ಪೂಜಾರಿ ಮನವಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ನಗರದ ಸಿಟಿ ಬಸ್ ನಿಲ್ದಾಣ ಸಮೀಪದಲ್ಲಿ ನಿರ್ಮಾಣವಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಕಂಚಿನ ಪುತ್ಥಳಿ ಅನಾವರಣ, ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಹಾಗೂ ಶ್ರೀ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಸಂಜೆ.17 ರಂದು ಹಮ್ಮಿಕೊಂಡಿದ್ದ ಬೃಹತ್ ಅಭಿನಂದನಾ ಸಮಾರಂಭಕ್ಕೆ ಕುರುಬ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಮಾಜದ ಯುವ ಮುಖಂಡ, ಉದ್ಯಮಿ ಯಲ್ಲಾಲಿಂಗ ಪೂಜಾರಿ ಮುಗುಟಾ ತಿಳಿಸಿದ್ದಾರೆ.
ಅಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 13 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅನಾವರಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಿಟಿ ಬಸ್ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಮಾಡಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಹಾಗೂ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಹೀಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಮತ್ತು ಮೂಲೆ ಮೂಲೆಗಳಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕುರುಬ ಸಮಾಜದ ಕುಲ ಬಾಂಧವರು ಭಾಗವಹಿಸಬೇಕು ಎಂದು ಕೋರಿದ್ದಾರೆ.
ಈ ಐತಿಹಾಸಿಕ ಸಮಾರಂಭವನ್ನು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಉದ್ಘಾಟಿಸಲಿದ್ದಾರೆ. ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಅವರು ಪುತ್ಥಳಿಗೆ ಪೂಜೆ ಸಲ್ಲಿಸಲಿದ್ದಾರೆ. ಕಾಗಿನೆಲೆಯ ಸಿದ್ದರಾಮಾನಂದ ಮಹಾಸ್ವಾಮಿಗಳು, ಹುಲಿಜಂತಿಯ ಮಾಳಿಂಗರಾಯ ಮಹಾರಾಜರು ಮತ್ತು ಹವಾ ಮಲ್ಲಿನಾಥ ಮಹಾರಾಜರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಧ್ವಜಾರೋಹಣ ಮಾಡುವರು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಕುರುಬ ಸಮಾಜದ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

