ಸೂಗೂರ ಗ್ರಾಮಕ್ಕೆ ಏ.11 ಕ್ಕೆ ಸಿಎಂ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ ಸ್ಥಳ ವೀಕ್ಷಣೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಸೂಗೂರ ಎನ್. ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭೋಜಲಿಂಗೇಶ್ವರ ದೇವಾಲಯ ಹಾಗೂ ಬೆಳ್ಳಿ ಲೇಪಿತ ರಥವನ್ನು ಸಿಎಂ ಸಿದ್ದರಾಮಯ್ಯನವರು ಏಪ್ರಿಲ್ 11 ರಂದು ಉದ್ಘಾಟಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಸೂಗೂರ ಗ್ರಾಮಕ್ಕೆ ತೆರಳಿ ಸಮಾರಂಭ ನಡೆಯುವ ಸ್ಥಳದ ವೀಕ್ಷಣೆ ಮಾಡಿದರು.
ಅಂದಿನ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರ ಆಸನದ ವ್ಯವಸ್ಥೆ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಸನದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರ ಸೌಲಭ್ಯಗಳನ್ನು ವೀಕ್ಷಿಸಿದರು.
ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಸೇರಿದಂತೆ ಇತರೆ ವಿಷಯಗಳ ಕುರಿತಂತೆ ಸಚಿವರ ಅಧಿಕಾರಿಗಳೊಂದಿಗೆ ಚರ್ಚಿಸಿ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ತೊಗರಿ ಮಂಡಳಿ ಅಧ್ಯಕ್ಷ ಮಹೀಮೂದ್ ಸಾಹೇಬ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸಿಇಒ ಭಂವರ್ ಸಿಂಗ್ ಮೀನಾ, ತಹಸೀಲ್ದಾರ್ ನಾಗಯ್ಯ ಹಿರೇಮಠ, ಶಿವಾನಂದ ಪಾಟೀಲ, ವೀರಣ್ಣಗೌಡ ಪರಸರೆಡ್ಡಿ, ಮಹಾಂತೇಶ್ ಕೌಲಗಿ, ಭೀಮರೆಡ್ಡಿ ಕುರಾಳ ಸೇರಿದಂತೆ ಇತರೆ ಅಧಿಕಾರಿಗಳಿದ್ದರು.

