ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ | ಸ್ವಾವಲಂಬಿ ಜೀವನದೊಂದಿಗೆ ಸುಂದರ ಕುಟುಂಬ ರೂಪಿಸಿಕೊಳ್ಳಿ: ಭಾರತಿ ಕರೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮಹಿಳೆಯರು ಶಿಕ್ಷಣ, ಉದ್ಯೋಗ, ಉದ್ಯಮ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮುನ್ನಡೆಯಬೇಕು. ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳುವುದರ ಜೊತೆಗೆ ಸುಂದರ ಕುಟುಂಬ ರೂಪಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಕರೆ ನೀಡಿದರು.
ಪಟ್ಟಣದ ಕಂಬಳೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ “ವಲಸೆ ತಡೆಯುವಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಚಟುವಟಿಕೆಗಳ ಮೂಲಕ ಆರ್ಥಿಕ ಅಭಿವೃದ್ಧಿ ಕುರಿತು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಹೇಳಿದರು.
ಪುರಸಭೆ ಮಾಜಿ ಅಧ್ಯಕ್ಷೆ ಶೀಲಾ ಬಿ. ಕಾಶಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಯಲ್ಲಿಯೂ ಪ್ರಮುಖ ಪಾತ್ರ ವಹಿಸಬೇಕು. ಮಹಿಳೆಯರ ಆತ್ಮವಿಶ್ವಾಸ, ಸಂಘಟನಾ ಶಕ್ತಿ ಮತ್ತು ನಾಯಕತ್ವ ಗುಣಗಳು ಸಮಾಜದ ಪ್ರಗತಿಗೆ ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಅತಿಥಿಗಳಾಗಿ ನ್ಯಾಯವಾದಿ ಜಯಸುಧಾ ಕೆ. ಮುಕ್ತೇದಾರ ಮಹಿಳೆಯರ ಕಾನೂನು ಹಕ್ಕುಗಳು, ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳು, ಕೌಟುಂಬಿಕ ಹಿಂಸೆ ತಡೆಗಟ್ಟುವಿಕೆ ಹಾಗೂ ಮಹಿಳೆಯರಿಗೆ ದೊರೆಯುವ ಕಾನೂನು ನೆರವಿನ ಕುರಿತು ಮಾಹಿತಿ ನೀಡಿದರು.
ಸಾನಿಧ್ಯ ವಹಿಸಿದ್ದ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರು ಮಾತನಾಡಿ, ಮಹಿಳೆಯರು ಕುಟುಂಬದ ಸಂಸ್ಕಾರ, ಸಮಾಜದ ಏಳಿಗೆ ಹಾಗೂ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದರು.
ಮಹಿಳೆಯರಿಗೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತಾಗ ಕುಟುಂಬ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮಹಿಳೆಯರು ಸಂಘಟಿತರಾಗಿ ಪರಸ್ಪರ ಸಹಕಾರದೊಂದಿಗೆ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂದು ಹಾರೈಸಿ ಆಶೀರ್ವದಿಸಿದರು.
ಕಲಬುರಗಿ ಪ್ರಾದೇಶಿಕ ವಿಭಾಗದ ಜ್ಞಾನ ವಿಕಾಸ ಯೋಜನಾಧಿಕಾರಿ ಜ್ಯೋತಿ ಜೋಳದ ಪ್ರಾಸ್ತಾವಿಕ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉದ್ದೇಶ ಹಾಗೂ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಯೋಜನೆಯ ಪಾತ್ರವನ್ನು ವಿವರಿಸಿದರು. ಮಹಿಳೆಯರು ತಮ್ಮಲ್ಲಿರುವ ಕೌಶಲ್ಯ, ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಗುರುತಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಉಮಾ ಎಂ. ಪೂಜಾರಿ, ಜೆಂಡರ್ ಸ್ಪೆಷಲಿಸ್ಟ್, ಮಿಷನ್ ಶಕ್ತಿ ಯೋಜನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ಕಲಬುರಗಿ ಇವರು ಮಹಿಳಾ ಸಬಲೀಕರಣ, ಮಹಿಳೆಯರ ಸುರಕ್ಷತೆ, ಹೆಣ್ಣುಮಕ್ಕಳ ಶಿಕ್ಷಣ, ಮಹಿಳೆಯರಿಗೆ ದೊರೆಯುವ ಸರ್ಕಾರಿ ಸೌಲಭ್ಯಗಳು ಹಾಗೂ ಮಿಷನ್ ಶಕ್ತಿ ಯೋಜನೆಯ ಉದ್ದೇಶ ಮತ್ತು ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
