Oplus_0

ವಾಡಿ ಪುರಸಭೆಯಲ್ಲಿ ಇ-ಖಾತಾ, ದೃಢೀಕರಣಕ್ಕೆ ಬೇಕಾಬಿಟ್ಟಿ ಹಣ ವಸೂಲಿ ಆರೋಪ: ಪಾರದರ್ಶಕತೆಗೆ ಬಿಜೆಪಿ ಆಗ್ರಹ

ನಾಗಾವಿ ಎಕ್ಸಪ್ರೆಸ್ 

ವಾಡಿ: ಪಟ್ಟಣದ ಪುರಸಭೆಯಲ್ಲಿ ಇ-ಖಾತಾ ಅರ್ಜಿ ಸಲ್ಲಿಕೆ, ದಾಖಲೆಗಳ ದೃಢೀಕರಣ ಪತ್ರ ಸೇರಿದಂತೆ ವಿವಿಧ ಸಾರ್ವಜನಿಕ ಸೇವೆಗಳಿಗೆ ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಾಗೂ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಕೂಡಲೇ ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.

ದೈನಂದಿನ ಆಸ್ತಿ ಮತ್ತು ಕಂದಾಯ ಸಂಬಂಧಿತ ಕೆಲಸಗಳಿಗಾಗಿ ಪುರಸಭೆಗೆ ಬರುವ ಜನಸಾಮಾನ್ಯರಿಗೆ ಸೇವೆಗಳು ಸುಲಭವಾಗಿ ಹಾಗೂ ಪಾರದರ್ಶಕವಾಗಿ ದೊರೆಯಬೇಕಿದೆ. ಆದರೆ, ಇ-ಖಾತಾ ಅರ್ಜಿ ಸಲ್ಲಿಕೆ, ದಾಖಲೆಗಳ ದೃಢೀಕರಣ ಹಾಗೂ ಇತರ ಪ್ರಕ್ರಿಯೆಗಳ ವೇಳೆ ಅನಧಿಕೃತವಾಗಿ ಹಣ ಕೇಳುತ್ತಿರುವುದಕ್ಕೆ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕಡತಗಳ ವಿಲೇವಾರಿಯಲ್ಲಿ ಉದ್ದೇಶಪೂರ್ವಕ ವಿಳಂಬ ಹಾಗೂ ಅನಗತ್ಯ ಅಲೆದಾಟದಿಂದ ಬೇಸತ್ತ ಕೆಲವರು, ಅನಿವಾರ್ಯವಾಗಿ ಹೆಚ್ಚುವರಿ ಹಣ ನೀಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

ಈ ಅಕ್ರಮ ವಸೂಲಿಯಿಂದ ಬಡ ಮತ್ತು ಮಧ್ಯಮ ವರ್ಗದ ನಾಗರಿಕರಿಗೆ ತೀವ್ರ ಆರ್ಥಿಕ ಹೊರೆಯಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಪುರಸಭೆಯ ಎಲ್ಲಾ ಸಾರ್ವಜನಿಕ ಸೇವೆಗಳಿಗೆ ನಿಗದಿಪಡಿಸಲಾದ ಅಧಿಕೃತ ಶುಲ್ಕದ ವಿವರಗಳನ್ನು ಕಚೇರಿಯ ಸೂಚನಾ ಫಲಕದಲ್ಲಿ ಸ್ಪಷ್ಟವಾಗಿ ಪ್ರಕಟಿಸಬೇಕು, ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು, ಅನಧಿಕೃತ ಹಣ ವಸೂಲಿ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಾಡಿ ಪುರಸಭೆಯ ಕಚೇರಿ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವೀರಣ್ಣ ಯಾರಿ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!