ಯಾದಗಿರಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನಾಚರಣೆ | ಸಂವಿಧಾನದ ಆಶಯಗಳ ಪಾಲನೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಭೀಮಾಶಂಕರ ಬಿಲ್ಲವ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಘನತೆಯಿಂದ ಬದುಕುವ ಹಕ್ಕನ್ನು ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಗೌರವಿಸಿ, ಅದರ ಮೌಲ್ಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಭೀಮಾಶಂಕರ ಬಿಲ್ಲವ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನದ ಪೀಠಿಕೆಗೆ ಪುಷ್ಪನಮನ ಸಲ್ಲಿಸಿ, ಸಾಮೂಹಿಕವಾಗಿ ಸಂವಿಧಾನದ ಪೀಠಿಕೆಯನ್ನು ವಾಚಿಸುವ ಮೂಲಕ ಸಂವಿಧಾನ ದಿನವನ್ನು ಆಚರಿಸಲಾಯಿತು.
ಬಳಿಕ ಮಾತನಾಡಿದ ಅವರು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟ ಸಂವಿಧಾನವು ದೇಶದ ಏಕತೆ, ಸಮಗ್ರತೆ ಮತ್ತು ಸಾಮಾಜಿಕ ನ್ಯಾಯದ ಪ್ರತೀಕವಾಗಿದೆ ಎಂದರು, ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಅಪಾರ ಜ್ಞಾನ, ದೂರದೃಷ್ಟಿ ಮತ್ತು ಪರಿಶ್ರಮದ ಮೂಲಕ ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಂವಿಧಾನವು ಜಾತಿ, ಧರ್ಮ, ಭಾಷೆ ಹಾಗೂ ವರ್ಗಗಳ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಅವಕಾಶಗಳನ್ನು ಕಲ್ಪಿಸಿದೆ. ಅವರ ತತ್ವಾದರ್ಶಗಳು ಮತ್ತು ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಡಾ. ಅಂಬೇಡ್ಕರ್ ಅವರ ಜೀವನ, ಸಾಧನೆ ಮತ್ತು ಸಂವಿಧಾನದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. 2015ರಿಂದ ನವೆಂಬರ್ 26ರಂದು ಅಧಿಕೃತವಾಗಿ ಸಂವಿಧಾನ ದಿನ ಆಚರಿಸುವ ಮೂಲಕ ಸಂವಿಧಾನದ ಮೌಲ್ಯಗಳು ಹಾಗೂ ನಾಗರಿಕರ ಕರ್ತವ್ಯಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಅಂಬೇಡ್ಕರ್ ಅವರ ಸ್ಮರಣಾರ್ಥ ಪಂಚತೀರ್ಥಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಪಾಲಿಸಬೇಕು. ಸಮಾಜದಲ್ಲಿ ಪರಸ್ಪರ ಗೌರವ, ಸೌಹಾರ್ದತೆ ಮತ್ತು ಸಹೋದರತ್ವವನ್ನು ಬೆಳೆಸುವ ಮೂಲಕ ಬಲಿಷ್ಠ ಹಾಗೂ ಸಮೃದ್ಧ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಲಿತಾ ಅನಪುರ್, ಮಾಜಿ ಅಲೆಮಾರಿ ನಿಗಮದ ಅಧ್ಯಕ್ಷ ದೇವಿಂದ್ರನಾಥ ನಾದ್, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಮಹೇಶ್ ರೆಡ್ಡಿ ಮುದ್ನಾಳ, ಬಿಜೆಪಿ ರಾಜ್ಯ ಮಾಜಿ ಉಪಾಧ್ಯಕ್ಷ ನಾಗರತ್ನ ಕುಪ್ಪಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರುಕುಂದ, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಭೀಮಾಶಂಕರ ಬಿಲ್ಲವ, ಮಾಜಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಲಕ್ಷ್ಮೀಪುತ್ರ ಮಾಲಿ ಪಾಟೀಲ, ಯುವ ಮೋರ್ಚಾ ಮಾಜಿ ಅಧ್ಯಕ್ಷ ಶ್ರೀಧರ್ ಸಾಹುಕಾರ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸುನಿತಾ ಚವ್ಹಾಣ, ವಿಜಯಲಕ್ಷ್ಮಿ ನಾಯಕ್, ಶಕುಂತಲಾ ಚಂದ್ರಕಲಾ ನಗರಸಭೆ ಮಾಜಿ ಉಪಾಧ್ಯಕ್ಷ ರುಕಿಯಾ ಬೇಗಂ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಸ್ವಾಮಿ ದೇವ್ ದಾಸನಕೇರಿ, ಮಲ್ಲಿಕಾರ್ಜುನ್ ಹೊನಗೇರ್, ಅನಿಲ್ ಕರಾಟೆ, ಶಿವರಾಜ್ ದಾಸನಕೇರಿ, ವೆಂಕಟರೆಡ್ಡಿ ಅಬ್ಬೆ ತುಮಕೂರು, ಗೋಪಾಲ ದಾಸನಕೇರಿ, ರಾಮು ಚವ್ಹಾಣ, ಚಂದ್ರಶೇಖರ್ ಕಡೆಸೂರ, ರಾಜಶೇಖರ್ ಉಪ್ಪಿನ, ಮಲ್ಲು ಕೋಳಿವಾಡ, ಬಸವರಾಜ್ ಸೊನ್ನದ, ಶ್ರೀಕಾಂತ್ ಸುಂಗುಲಕರ್, ಗೋವಿಂದಪ್ಪ ಕೊಂಚಟ್ಟಿ, ಆಂಜನೇಯ ಬಬಲಾದಿ, ಚನ್ನವೀರಯ್ಯ ಸ್ವಾಮಿ ಹಿರೇಮಠ, ಬಸವರಾಜ ಚವ್ಹಾಣ, ಮಲ್ಲು ಮುದ್ನಾಳ, ಅವಿನಾಶ್ ಶಹಾಪುರ ಸೇರಿದಂತೆ ಇತರರು ಇದ್ದರು.

