ಯಾದಗಿರಿ ಜಿಲ್ಲಾಡಳಿತ ವತಿಯಿಂದ ಏ.23 ರಂದು ಭಗೀರಥ ಜಯಂತಿ ಆಚರಣೆ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕಟ್ಟಿಮನಿ ಮನವಿ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ಜಿಲ್ಲಾಡಳಿತ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಏಪ್ರಿಲ್ 23 ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಶ್ರೀ ಭಗೀರಥ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಟ್ಟಿಮನಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಮಹರ್ಷಿ ಭಗೀರಥರ ಆದರ್ಶ ಜೀವನ, ತಪಸ್ಸು ಹಾಗೂ ಸಮಾಜಮುಖಿ ಸಂದೇಶಗಳನ್ನು ಜನರಿಗೆ ಪರಿಚಯಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ಅಂದು ಬೆಳಿಗ್ಗೆ 9 ಗಂಟೆಗೆ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭವಾಗಿ ಶಾಸ್ತ್ರಿ ವೃತ್ತ, ಸುಭಾಷ್ ವೃತ್ತಗಳ ಮೂಲಕ ಸರ್ಕಾರಿ ಪದವಿ ಮಹಾವಿದ್ಯಾಲಯದವರೆಗೆ ಸಾಗಲಿದೆ. ನಂತರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.
ಮೆರವಣಿಗೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಚನ್ನರೆಡ್ಡಿ ಪಾಟೀಲ್ ತುನ್ನೂರ್, ಶಾಸಕ ರಾಜಾ ವೇಣುಗೋಪಾಲ್ ನಾಯಕ್, ಶಾಸಕ ಶರಣಗೌಡ ಕಂದಕೂರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಬಿಜೆಪಿ ಮುಖಂಡರಾದ ರಾಚನಗೌಡ ಮುದ್ನಾಳ ಹಾಗೂ ಮಹೇಶ್ ರೆಡ್ಡಿ ಮುದ್ನಾಳ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಉಪನ್ಯಾಸಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜಿಲ್ಲೆಯಾದ್ಯಂತ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷಚಂದ್ರ ಕೋಟಗೇರಾ, ನಿವೃತ್ತ ಪಿಎಸ್ಐ ಯಂಕಣ್ಣ ಶಹಾಪುರಕರ್, ಕೋಟಗೇರಾ ಪಿಲ್ ಡಿ ಬ್ಯಾಂಕ್ ಅಧ್ಯಕ್ಷ ರಾಮಣ್ಣ ಬಳಿಚಕ್ರ, ಸಂಘಟನಾ ಕಾರ್ಯದರ್ಶಿಗಳಾದ ರಾಮಲಿಂಗಪ್ಪ ಯರಗೋಳ, ತಮ್ಮಣ್ಣ ಉಪ್ಪಾರ ಬಳಿಚಕ್ರ, ಉಪ್ಪಾರ ಸಮಾಜದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಶ್ವನಾಥ್ ಗುಡೂರು, ಬಿಮಷಪ್ಪ ಕಣೇಕಲ್, ತಿಮ್ಮಣ್ಣ ಬಳಿಚಕ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

